ಉಡುಪಿ: 214 ಮಂದಿಗೆ ಕೊರೋನ ಪಾಸಿಟಿವ್ ; ಓರ್ವ ಮೃತ್ಯು

Update: 2021-07-26 14:30 GMT

ಉಡುಪಿ, ಜು.26: ಜಿಲ್ಲೆಯಲ್ಲಿ ಸೋಮವಾರ ಒಟ್ಟು 214 ಮಂದಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಒಬ್ಬರು ಮೃತಪಟ್ಟರೆ, 82 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 882 ಮಂದಿ ಈಗಲೂ ಸೋಂಕಿಗೆ ಸಕ್ರಿಯರಾಗಿದ್ದು ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಸೋಮವಾರ ಉಡುಪಿಯ 69 ವರ್ಷ ಪ್ರಾಯದ ಹಿರಿಯ ನಾಗರಿಕರೊ ಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಮೃತಪಟ್ಟವರ ಸಂಖ್ಯೆ 410ಕ್ಕೇರಿದೆ. ಕಿಡ್ನಿ ಸಮಸ್ಯೆ, ಅಧಿಕ ರಕ್ತದೊತ್ತಡದಿಂದ ಬಳಲುತಿದ್ದ ಹಿರಿಯರಲ್ಲಿ ಗಂಭೀರ ಕೋವಿಡ್ ಲಕ್ಷಣ ದೊಂದಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜು.20ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟರು ಎಂದು ತಿಳಿದುಬಂದಿದೆ.

ಇಂದು ಕೊರೋನ ಪಾಸಿಟಿವ್ ದೃಢಪಟ್ಟ 214 ಮಂದಿಯಲ್ಲಿ 111 ಮಂದಿ ಪುರುಷರಾಗಿದ್ದರೆ, ಉಳಿದ 103 ಮಂದಿ ಮಹಿಳೆಯರು. ಇವರಲ್ಲಿ 101 ಮಂದಿ ಉಡುಪಿ ತಾಲೂಕಿನವರಾದರೆ, 51 ಮಂದಿ ಕುಂದಾಪುರ, 60 ಮಂದಿ ಕಾರ್ಕಳ ತಾಲೂಕು ಹಾಗೂ ಇಬ್ಬರು ಹೊರ ಜಿಲ್ಲೆಯವರಾಗಿದ್ದಾರೆ. ಇವರಲ್ಲಿ 26 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 188 ಮಂದಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ರವಿವಾರ 82 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 67,799ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 2321 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆ ಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 69,091ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,64,676 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಜಿಲ್ಲೆಯಲ್ಲೀಗ ಎಂಟು ಮಂದಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ. ಇವರಲ್ಲಿ ಏಳು ಮಂದಿ ಹೊರಜಿಲ್ಲೆಯವರಾಗಿದ್ದು, ಇವರೆಲ್ಲರೂ ಮಣಿಪಾಲ ಕೆಎಂಸಿ ಹಾಗೂ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ.

1,853 ಮಂದಿಗೆ ಕೋವಿಡ್ ಲಸಿಕೆ

ಉಡುಪಿ ಜಿಲ್ಲೆಯಲ್ಲಿ ಸೋಮವಾರ 11,853 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 5,819 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 6,034 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 3,099 ಮಂದಿ ಮೊದಲ ಡೋಸ್ ಹಾಗೂ 543 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 2,703 ಮಂದಿ ಮೊದಲ ಡೋಸ್ ಹಾಗೂ 5,427 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 16 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 62 ಮಂದಿ ಮುಂಚೂಣಿ ಕಾರ್ಯಕರ್ತರಿಗೂ ಇಂದು ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 4,98,177 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,76,085 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿ ದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News