ಆ.15ರಿಂದ ನರೇಗಾ ಯೋಜನೆಯಡಿ ರೈತಬಂಧು ಅಭಿಯಾನ

Update: 2021-07-26 15:27 GMT

ಮಂಗಳೂರು, ಜು.26: ರೈತರಿಗೆ ಎರೆಹುಳು ಗೊಬ್ಬರ ತಯಾರಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆ.15ರಿಂದ ಅಕ್ಟೋಬರ್ 15ರವರೆಗೆ ರೈತ ಬಂಧು ಅಭಿಯಾನ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಈ ಅಭಿಯಾನದಡಿಯಲ್ಲಿ ಪ್ರತಿ ಗ್ರಾಪಂಗೆ ಕನಿಷ್ಠ 25 ಎರೆಹುಳು ತೊಟ್ಟಿಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಜಿಪಂ ಸಿಇಒ ಡಾ.ಕುಮಾರ್ ತಿಳಿಸಿದ್ದಾರೆ.

ನಗರದ ಜಿಪಂ ಕಚೇರಿಯ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ರೈತಬಂಧು ಅಭಿಯಾನ’ ಸಭೆಯಲ್ಲಿ ಅವರು ಮಾತನಾಡಿದರು.

ರಾಸಾಯನಿಕ ಗೊಬ್ಬರದ ಬದಲಾಗಿ ಎರೆಹುಳು ಗೊಬ್ಬರದ ಉಪಯೋಗದಿಂದ ಉತ್ಪಾದನೆ ವೆಚ್ಚ ಕಡಿಮೆಯಾಗುತ್ತಿರುವುದರಿಂದ ರೈತರ ಆದಾಯ ಹೆಚ್ಚಲಿದೆ. ರೈತರಲ್ಲಿ ಎರೆಹುಳು ಗೊಬ್ಬರ ಉತ್ಪಾದನೆ, ಅದರ ಉಪಯುಕ್ತತತೆ ಹಾಗೂ ಸಾವಯವ ಕೃಷಿಯನ್ನು ಉತ್ತೇಜಿಸು ವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಹೇಳಿದರು.

ಅಭಿಯಾನದ ಕುರಿತು ಎಲ್ಲ ಗ್ರಾಪಂಗಳ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಸಾಯನಿಕ ಗೊಬ್ಬರ ಬಳಕೆಯಿಂದ ಆಗುವ ದುಷ್ಪರಿಣಾಮಗಳು ಹಾಗೂ ಗೊಬ್ಬರ ಬಳಕೆಯಿಂದ ಆಗುವ ಲಾಭಗಳ ಕುರಿತು ರೈತರಲ್ಲಿ ಅರಿವು ಮೂಡಿಸಬೇಕು. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮಾಧ್ಯಮಗಳ ಮೂಲಕ ಅಭಿಯಾನದ ಕುರಿತು ವ್ಯಾಪಕ ಪ್ರಚಾರವನ್ನು ಕೈಗೊಳ್ಳುವಂತೆ ಸೂಚಿಸಿದರು. ಎರೆಹುಳು ಗೊಬ್ಬರ ತೊಟ್ಟಿಗಳ ನಿರ್ಮಾಣ ಹಾಗೂ ಯಶೋಗಾಥೆಗಳ ದಾಖಲೀಕರಣ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ತೋಟಗಾರಿಕೆ ಉಪನಿರ್ದೇಶಕ ಎಚ್.ಆರ್. ನಾಯಕ್ ಮಾತನಾಡಿ, ಎರೆಹುಳು ತೊಟ್ಟಿ ನಿರ್ಮಾಣಕ್ಕಾಗಿ ಈಗಾಗಲೇ ಕ್ರಿಯಾ ಯೋಜನೆ ತಯಾರಿಸಲಾಗಿದೆ. ಕ್ರಿಯಾ ಯೋಜನೆಗೆ ಅನುಮೋದನೆ ದೊರೆತಲ್ಲಿ ಅಂದಾಜು ಪಟ್ಟಿಯನ್ನು ತಯಾರಿಸಲಾಗುವುದು ಎಂದು ತಿಳಿಸಿದರು.

ರೈತ ಬಂಧು ಅಭಿಯಾನದ ಯಶಸ್ವಿ ಅನುಷ್ಠಾನಕ್ಕಾಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ ಎಂದರು.

ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ಸೀತಾ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News