ಆರ್.ಅಶೋಕ್, ಶ್ರೀರಾಮುಲು, ಗೋವಿಂದ ಕಾರಜೋಳಗೆ ಡಿಸಿಎಂ ಹುದ್ದೆ?

Update: 2021-07-28 03:57 GMT
ಆರ್.ಅಶೋಕ್,  ಶ್ರೀರಾಮುಲು,  ಗೋವಿಂದ ಕಾರಜೋಳ

ಬೆಂಗಳೂರು, ಜು.27: ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮಾಜಿ ಗೃಹ ಸಚಿವ, ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ನಾಳೆ(ಜು.28) ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ, ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಹೆಸರನ್ನು ಪ್ರಸ್ತಾಪಿಸಿದರೇ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅನುಮೋದಿಸಿದರು.

ನೂತನ ಮುಖ್ಯಮಂತ್ರಿಯ ಜೊತೆಯಲ್ಲೆ ಮೂವರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದ್ದು, ಆರ್.ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಬಸವರಾಜ ಬೊಮ್ಮಾಯಿ ಅವರ ಆಯ್ಕೆಯನ್ನು ಬಿಜೆಪಿ ಸಂಸದೀಯ ಮಂಡಳಿ ವತಿಯಿಂದ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಘೋಷಿಸುತ್ತಿದ್ದಂತೆ ಎಲ್ಲ ಶಾಸಕರು ಚಪ್ಪಾಳೆ ತಟ್ಟುವ ಮೂಲಕ ಅಭಿನಂದಿಸಿದರು. ಆನಂತರ, ಬಸವರಾಜ ಬೊಮ್ಮಾಯಿ ನೇರವಾಗಿ ವೇದಿಕೆ ಮೇಲೆ ಆಸೀನರಾಗಿದ್ದ ಯಡಿಯೂರಪ್ಪ ಅವರ ಬಳಿ ಬಂದು ಕಾಲಿಗೆ ನಮಸ್ಕರಿಸಿದರು.

ಶಾಸಕಾಂಗ ಪಕ್ಷದ ನೂತನ ನಾಯಕ ಬಸವರಾಜ ಬೊಮ್ಮಾಯಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಇನ್ನಿತರ ಮುಖಂಡರು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಯಡಿಯೂರಪ್ಪ ರಾಜೀನಾಮೆ ಬಳಿಕ ನೂತನ ಮುಖ್ಯಮಂತ್ರಿ ಆಯ್ಕೆಯಾಗಿ ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ಲಿಂಗಾಯತ ಸಮುದಾಯದ ಯಡಿಯೂರಪ್ಪ ಅವರಿಂದ ತೆರವಾಗಿರುವ ಸ್ಥಾನಕ್ಕೆ ಲಿಂಗಾಯತರನ್ನೆ ನೇಮಕ ಮಾಡಬೇಕು ಎಂದು ವಿವಿಧ ಮಠಾಧೀಶರು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು.

ಈ ನಡುವೆ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಮುರುಗೇಶ್ ನಿರಾಣಿ, ಅರವಿಂದ ಬೆಲ್ಲದ್ ಹೆಸರು ಹೆಚ್ಚು ಚರ್ಚೆಗೊಳಪಟ್ಟಿದ್ದವು. ಜೊತೆಗೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೆಸರು ಕೇಳಿ ಬಂದಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News