ನಾಳೆ ಉತ್ತರ ಕನ್ನಡ ಜಿಲ್ಲೆಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ: ಮಳೆ ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಶೀಲನೆ

Update: 2021-07-28 16:18 GMT

ಬೆಂಗಳೂರು, ಜು.28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಸವರಾಜ ಬೊಮ್ಮಾಯಿ, ನಾಳೆ ಉತ್ತರ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕಾರ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೆ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೂ ಸಭೆ ನಡೆಸಲಿದ್ದಾರೆ.

ಜು.29ರಂದು ಬೆಳಗ್ಗೆ 9.30ಕ್ಕೆ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹುಬ್ಬಳಿಗೆ ತೆರಳಲಿರುವ ಮುಖ್ಯಮಂತ್ರಿ, ಅಲ್ಲಿಂದ ರಸ್ತೆ ಮೂಲಕ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ, ಕಾರವಾರ ಮತ್ತು ಅಂಕೋಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ, ಪರಿಹಾರ ಕ್ರಮಗಳ ಪರಿಶೀಲನೆ ಮತ್ತು ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಮಧ್ಯಾಹ್ನ ಎರಡು ಗಂಟೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಗಳ ಕುರಿತಂತೆ ಶಾಸಕರು, ಸಂಸತ್ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಅಂಕೋಲಾದಲ್ಲಿರುವ ನಾಡವರ ಸಭಾ ಭವನದಲ್ಲಿ ಚರ್ಚೆ ನಡೆಸಲಿದ್ದಾರೆ.

ಆನಂತರ, ರಸ್ತೆ ಮೂಲಕ ಅಂಕೋಲಾದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆ ಮೂಲಕ ಆಗಮಿಸಿ, ವಿಶೇಷ ವಿಮಾನದ ಮೂಲಕ ಸಂಜೆ 7 ಗಂಟೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News