ಶಾಸಕಿ ಪೂರ್ಣಿಮಾ ಶ್ರೀನಿವಾಸ್‍ಗೆ ಸಚಿವ ಸ್ಥಾನ?

Update: 2021-07-29 13:02 GMT

ಬೆಂಗಳೂರು, ಜು. 29: ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿರುವ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನವನ್ನು ನೀಡಲು ಬಿಜೆಪಿ ಹೈಕಮಾಂಡ್ ನಾಯಕರು ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ದೃಷ್ಟಿಯಲ್ಲಿಟ್ಟುಕೊಂಡು ಚಿತ್ರದುರ್ಗ ಸೇರಿದಂತೆ ರಾಜ್ಯದಲ್ಲಿ 40 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಯಾದವ(ಗೊಲ್ಲ) ಸಮುದಾಯದ ಮತಗಳನ್ನು ಸೆಳೆಯಲು ಅದೇ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಲು ವರಿಷ್ಟರು ಚಿಂತನೆ ನಡೆಸಿದ್ದು, ಉಪಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.

ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವರಾಗಿದ್ದ ಶಶಿಕಲಾ ಜೊಲ್ಲೆ ಅವರು ಮೊಟ್ಟೆ ಖರೀದಿ ವಿವಾದಕ್ಕೆ ಸಿಲುಕಿರುವುದರಿಂದ ಅವರನ್ನು ಪುನಃ ಸಂಪುಟಕ್ಕೆ ತೆಗೆದುಕೊಳ್ಳುವುದು ಅನುಮಾನ. ಇದೇ ವೇಳೆ ಕಾರವಾರದಿಂದ ಶಾಸಕಿಯಾಗಿರುವ ರೂಪಾಲಿ ನಾಯಕ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಕಡಿಮೆ. ಹೀಗಾಗಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಪ್ರಾತಿನಿಧ್ಯ ನೀಡುವ ಸಾಧ್ಯತೆಗಳಿವೆ.

ಇತ್ತೀಚೆಗೆ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯದಿಂದ ಶೋಭಾ ಕರಂದ್ಲಾಜೆ ಸೇರ್ಪಡೆಯಾಗಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜಸಭೆ ಪ್ರತಿನಿಧಿಸುತ್ತಿದ್ದು, ಮಹಿಳೆಯರಿಗೆ ಸೂಕ್ತ ಸ್ಥಾನಮಾನ ನೀಡಿದ್ದೇವೆ ಎಂಬ ಸಂದೇಶವನ್ನು ರವಾನಿಸಲು ಸಜ್ಜಾಗಿರುವ ಬಿಜೆಪಿ ಮೊದಲ ಬಾರಿಗೆ ರಾಜ್ಯದಲ್ಲಿ ಮಹಿಳೆಯೊಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಇತಿಹಾಸ ಸೃಷ್ಟಿಸಲು ಮುಂದಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News