ಮಹದಾಯಿ ಯೋಜನೆಗೆ ಮೊದಲ ಪ್ರಾಶಸ್ತ್ಯ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-07-29 13:53 GMT

ಹುಬ್ಬಳ್ಳಿ, ಜು. 29: `ಉತ್ತರ ಕರ್ನಾಟಕ ಭಾಗಕ್ಕೆ ನೀರು ಒದಗಿಸುವ `ಮಹದಾಯಿ ಯೋಜನೆ'ಗೆ ಮೊದಲ ಪ್ರಾಶಸ್ತ್ಯ ನೀಡುತ್ತೇನೆ. ಈ ಕುರಿತು ಏನು ಮಾಡಬೇಕೆಂದು ನನಗೆ ಬಹಳ ಸ್ಪಷ್ಟತೆ ಇದೆ. ಗೆಜೆಟ್ ನೋಟಿಫಿಕೇಷನ್ ಸಿಕ್ಕ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ಶಾಸಕರು, ಮುಖಂಡರು ಇದ್ದಾರೆ. ಎಲ್ಲರೊಂದಿಗೆ ಚರ್ಚಿಸಿ ಸಲಹೆ ಸ್ವೀಕರಿಸುತ್ತೇನೆ. ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೂ ಆದ್ಯತೆ ನೀಡುತ್ತೇನೆ' ಎಂದು ಹೇಳಿದರು.

`ನಾನು ಹುಬ್ಬಳ್ಳಿಯಲ್ಲೇ ಹುಟ್ಟಿ ಬೆಳೆದವನು. ನನಗೆ ದೊಡ್ಡ ಸ್ನೇಹಿತರ ಬಳಗವೇ ಇಲ್ಲಿ ಇದೆ. ಇದು ನನಗೆ ಅತ್ಯಂತ ಪ್ರೀತಿಯ ಊರು. ಮುಖ್ಯಮಂತ್ರಿ ಆಗಿ ಹುಬ್ಬಳ್ಳಿಗೆ ಬರುತ್ತೇನೆಂದು ಎಂದೂ ಅಂದುಕೊಂಡಿರಲಿಲ್ಲ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿರ್ಣಯದಿಂದ ಮುಖ್ಯಮಂತ್ರಿಯಾದೆ. ಕೇಂದ್ರದ ನಾಯಕರು ನನಗೆ ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲರ ಆಶೀರ್ವಾದದಿಂದ ಉತ್ತಮ ಕೆಲಸ ಮಾಡುತ್ತೇನೆ' ಎಂದು ತಿಳಿಸಿದರು.

`ನಾಳೆ(ಜು.30) ಕೇಂದ್ರದ ನಾಯಕರ ಭೇಟಿಗೆ ಹೊಸದಿಲ್ಲಿಗೆ ಹೋಗುತ್ತಿದ್ದೇನೆ. ಮೊದಲಿಗೆ ಅವರ ಆಶೀರ್ವಾದ ಪಡೆಯುತ್ತೇನೆ. ಕೇಂದ್ರದ ನಾಯಕರ ಜತೆ ಸಚಿವ ಸಂಪುಟದ ಬಗ್ಗೆ ಚರ್ಚೆ ಮಾಡುತ್ತೇನೆ' ಎಂದ ಅವರು, ನಿನ್ನೆಯೇ ಶೆಟ್ಟರ್ ಅವರೊಂದಿಗೆ ಮಾತನಾಡಿದ್ದೇನೆ. ಶೆಟ್ಟರ್ ವೈಯಕ್ತಿಕವಾಗಿ ಬಂದು ಚರ್ಚಿಸುವುದಾಗಿ ಹೇಳಿದ್ದಾರೆ. ಅವರು ನನಗೆ ಆತ್ಮೀಯ ಸ್ನೇಹಿತರಿದ್ದಾರೆ. ಅವರೊಂದಿಗೆ ಚರ್ಚಿಸಿ ಅವರ ಸಮಸ್ಯೆ ತಿಳಿದುಕೊಳ್ಳುತ್ತೇನೆ. ಬಳಿಕ ವರಿಷ್ಠರೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುತ್ತೇನೆ' ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News