ಶಾಲೆಗಳಲ್ಲಿ ಶುಚಿ ಯೋಜನೆ ಅನುಷ್ಠಾನ ನಿರ್ಲಕ್ಷ್ಯ: ವಿವರಣೆ ನೀಡಲು ಆರೋಗ್ಯ ಇಲಾಖೆ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶನ

Update: 2021-07-29 18:24 GMT

ಬೆಂಗಳೂರು, ಜು.29:  ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲಾ-ಕಾಲೇಜುಗಳ ಪ್ರೌಢಾವಸ್ಥೆಯ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪ್‍ಕಿನ್ ಸೇರಿ ನೈರ್ಮಲ್ಯ ಹಾಗೂ ಶುಚಿತ್ವದ ವಸ್ತುಗಳನ್ನು ಪೂರೈಸುವ `ಶುಚಿ ಯೋಜನೆ' ಅನುಷ್ಠಾನದ ಬಗ್ಗೆ ನಿರ್ಲಕ್ಷ ವಹಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಈ ಕುರಿತು ಆ.5ರಂದು ಖುದ್ದು ವಿಚಾರಣೆಗೆ ಹಾಜರಾಗಿ ವಿವರಣೆ ನೀಡುವಂತೆ ಆರೋಗ್ಯ ಇಲಾಖೆ ಆಯುಕ್ತರಿಗೆ ನಿರ್ದೇಶನ ನೀಡಿದೆ.

ರಾಜ್ಯದ ಶಾಲೆಗಳ ಸ್ಥಿತಿಗತಿ ಹಾಗೂ ಮೂಲಸೌಕರ್ಯಗಳಿಗೆ ಸಂಬಂಧಿಸಿದಂತೆ `ಆ್ಯಂಟಿ ಕರಪ್ಷನ್ ಕೌನ್ಸಿಲ್ ಆಫ್ ಇಂಡಿಯಾ' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹೈಕೋರ್ಟ್ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಶುಚಿ ಯೋಜನೆ ಕೇವಲ ಕಾಗದಗಳಲ್ಲಿ ಉಳಿದುಕೊಂಡಿದೆ. ಸರಕಾರ ಈ ರೀತಿ ನಡೆದುಕೊಂಡರೆ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಸಬಲೀಕರಣದ ಗುರಿ ಸಾಧಿಸಲು ಹೇಗೆ ಸಾಧ್ಯವಾಗುತ್ತದೆ. ಹೀಗಾಗಿ, ಶುಚಿ ಯೋಜನೆಯ ಅನುಷ್ಠಾನದ ಪ್ರಗತಿ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಖುದ್ದು ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡಲಿ ಎಂದು ಆದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಆ.5ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News