ಉಡುಪಿ: ಶುಕ್ರವಾರ ಕೋವಿಡ್‌ಗೆ ಯುವಕ ಬಲಿ; 156 ಮಂದಿಗೆ ಸೋಂಕು ದೃಢ

Update: 2021-07-30 13:57 GMT
ಸಾಂದರ್ಭಿಕ ಚಿತ್ರ

ಉಡುಪಿ, ಜು.30: ಜಿಲ್ಲೆಯಲ್ಲಿ ಶುಕ್ರವಾರ 24ರ ಹರೆಯದ ಯುವಕನೊಬ್ಬ ಕೋವಿಡ್‌ಗೆ ಬಲಿಯಾಗಿದ್ದಾರೆ. ಕುಂದಾಪುರ ತಾಲೂಕಿನ ಈ ಯುವಕ ಜು.23 ರಂದು ಕೋವಿಡ್ ರೋಗಲಕ್ಷಣ ಹಾಗೂ ಉಸಿರಾಟ ತೊಂದರೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೂತ್ರಪಿಂಡ ವೈಫಲ್ಯ ಹಾಗೂ ಇತರ ಸಮಸ್ಯೆಗಳೊಂದಿಗೆ ಶುಕ್ರವಾರ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 415ಕ್ಕೇರಿದೆ.

ಜಿಲ್ಲೆಯಲ್ಲಿ ಶುಕ್ರವಾರ ಒಟ್ಟು 156 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದೆ. ಒಟ್ಟು 109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲೀಗ 1046 ಮಂದಿ ಸೋಂಕಿಗೆ ಸಕ್ರಿಯರಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕೊರೋನ ಪಾಸಿಟಿವ್ ದೃಢಪಟ್ಟ 156 ಮಂದಿಯಲ್ಲಿ 79 ಮಂದಿ ಪುರುಷರಾಗಿದ್ದರೆ, 77 ಮಂದಿ ಮಹಿಳೆಯರು. ಇವರಲ್ಲಿ 73 ಮಂದಿ ಉಡುಪಿ ತಾಲೂಕು, 36 ಮಂದಿ ಕುಂದಾಪುರ ಹಾಗೂ 40 ಮಂದಿ ಕಾರ್ಕಳ ತಾಲೂಕಿ ನವರು. ಉಳಿದಂತೆ ಹೊರಜಿಲ್ಲೆಗಳ ಏಳು ಮಂದಿಯೂ ಸೋಂಕಿಗೆ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. 156 ಮಂದಿಯಲ್ಲಿ 17 ಮಂದಿಗೆ ಕೋವಿಡ್ ಆಸ್ಪತ್ರೆ ಹಾಗೂ 139 ಮಂದಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗುರುವಾರ 109 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 68,167ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3,270 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 69,628ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 7,78,878 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಜಿಲ್ಲೆಯಲ್ಲಿ ಬ್ಲಾಕ್ ಫಂಗಸ್ ಸೋಂಕಿಗೆ ಆರು ಮಂದಿ ಮಣಿಪಾಲದ ಕೆಎಂಸಿ ಹಾಗೂ ಉಡುಪಿಯ ಆದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

1,416 ಮಂದಿಗೆ ಕೋವಿಡ್ ಲಸಿಕೆ
ಜಿಲ್ಲೆಯಲ್ಲಿ ಶುಕ್ರವಾರ 1,416 ಮಂದಿ ಕೋವಿಡ್ ಲಸಿಕೆ ಪಡೆದಿದ್ದಾರೆ. ಇವರಲ್ಲಿ 1,119 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 297 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 742 ಮಂದಿ ಮೊದಲ ಡೋಸ್ ಹಾಗೂ 80 ಮಂದಿ ಎರಡನೇ ಡೋಸನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 377 ಮಂದಿ ಮೊದಲ ಡೋಸ್ ಹಾಗೂ 216 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. ಇವರೊಂದಿಗೆ ಆರೋಗ್ಯ ಕಾರ್ಯಕರ್ತರೋರ್ವರಿಗೂ ಲಸಿಕೆ ನೀಡಲಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 5,06,867 ಮಂದಿ ಲಸಿಕೆಯ ಮೊದಲ ಡೋಸ್ ಪಡೆದರೆ, 1,80,245 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News