ಕಾಂಗ್ರೆಸ್ ಪಕ್ಷದ ಮೈಸೂರು ವಿಭಾಗೀಯ ಮಟ್ಟದ ಸಭೆ ಆರಂಭ

Update: 2021-07-31 06:05 GMT

ಮೈಸೂರು, ಜು.31: ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ವಿಭಾಗೀಯ ಮಟ್ಟದ ಸಭೆಗಳನ್ನು ನಡೆಸುತ್ತಿದ್ದು ಶನಿವಾರ ಮೈಸೂರು ವಿಭಾಗ ಮಟ್ಟದ ಸಭೆಯು ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ನಲ್ಲಿ ಆರಂಭಗೊಂಡಿದೆ.

ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭಾಗವಹಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ರಾಮಲಿಂಗಾ ರೆಡ್ಡಿ, ಸಲೀಂ ಆಹಮದ್, ಸತೀಶ್ ಜಾರಕಿಹೊಳಿ, ಈಶ್ವರ ಖಂಡ್ರೆ, ಆರ್.ಧ್ರುವನಾರಾಯಣ್ ಸೇರಿದಂತೆ ಮಾಜಿ ಸಚಿವರುಗಳು, ಶಾಸಕರುಗಳು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು ಮತ್ತು ವಿಧಾನ ಸಭೆ ಮತ್ತು ಲೋಕಸಭೆಯಲ್ಲಿ ಚುನಾವಣೆಯಲ್ಲಿ ಪರಾಜಿತಗೊಂಡ ಅಭ್ಯರ್ಥಿಗಳು ಭಾಗವಹಿಸಿದ್ದಾರೆ.

ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳ ಮುಖಂಡರುಗಳೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಲಾಗುತ್ತಿದೆ.

ಸುರ್ಜೇವಾಲರಿಗೆ ಪೂರ್ಣಕುಂಭ ಸ್ವಾಗತ

ವಿಭಾಗೀಯ ಮಟ್ಟದ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಸಭೆಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರಿಗೆ ಅದ್ಧೂರಿ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

 ಹುಬ್ಬಳ್ಳಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ರೈಲಿನಲ್ಲಿ ಶನಿವಾರ ಮೈಸೂರಿಗೆ ಆಗಮಿಸಿದ ಅವರನ್ನು ರೈಲು ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರು ಪೂರ್ಣ ಕುಂಭ ಸ್ವಾಗತ ನೀಡಿದರು. ಈ ವೇಳೆ ಮಂಗಳವಾಧ್ಯದೊಂದಿಗೆ ಅವರನ್ನು ಬರಮಾಡಿಕೊಳ್ಳಲಾಯಿತು. ನಂತರ ಕಾಂಗ್ರೆಸ್ ಕಾರ್ಯರ್ತರು ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ಕ್ರೇನ್ ಮೂಲಕ ಸೇಬಿನ ಹಾರ ಹಾಕಿ ಜೈಕಾರ ಕೂಗಿದರು.

ಬಳಿಕ ಟಾಂಗ ಸಾರೋಟಿನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿ ವರೆಗೆ ಮೆರವಣಿಗೆ ಮೂಲಕ ಕರೆತರಲಾಯಿತು. ಅಲ್ಲಿಂದ ಮೈಸೂರು ಹೊರವಲಯದ ಖಾಸಗಿ ರೆಸಾರ್ಟ್‌ನಲ್ಲಿ ನಡೆಯಲಿರುವ ವಿಭಾಗೀಯ ಮಟ್ಟದ ಸಭೆಗೆ ಕಾರಿನಲ್ಲಿ ತೆರಳಿದರು. ಇವರನ್ನು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿಕೊಂಡು ಕರೆದೊಕೊಂಡು ಹೋದರು.

ಈ ವೇಳೆ ಪಕ್ಷದ ಮುಖಂಡರು, ಕಾರ್ಯಕರ್ತರು ಸುರಕ್ಷಿತ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡುಬಂತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News