ದ.ಕ. ಜಿಲ್ಲೆಯಿಂದ ಕಾಸರಗೋಡಿಗೆ ಬಸ್ ಸಂಚಾರ ಸ್ಥಗಿತ : ನಳಿನ್‌ ಕುಮಾರ್ ಕಟೀಲು

Update: 2021-07-31 14:40 GMT

ಮಂಗಳೂರು, ಜು.31: ನೆರೆಯ ಕೇರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಿಂದ ಕಾಸರಗೋಡಿಗೆ ಸಂಚರಿಸುವ ಸರಕಾರಿ ಹಾಗೂ ಖಾಸಗಿ ಬಸ್‌ಗಳನ್ನು ಆ.1ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೊರೋನ ಪಾಸಿಟಿವಿಟಿ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿಯೂ ಹೆಚ್ಚಾಗುತ್ತಿದ್ದು, ಜಿಲ್ಲೆಯ ಗಡಿಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕೊರೋನ ಸೋಂಕು ಹರಡದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದೆ ಎಂದರು.

ಆ.1ರಿಂದ ಏಳು ದಿನ ಮಂಗಳೂರಿನಿಂದ ಕೇರಳ ರಾಜ್ಯದ ಕಾಸರಗೋಡಿಗೆ ಹೋಗುವ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್‌ಗಳ ಸಂಚಾರವನ್ನು ನಿಲ್ಲಿಸಬೇಕು. ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಇರಬೇಕು. ಮುಖ್ಯವಾಗಿ ಅಲ್ಲಿನ ವಿದ್ಯಾರ್ಥಿಗಳು ಮಂಗಳೂರಿನಲ್ಲಿ ತಾವಿರುವ ವಿದ್ಯಾರ್ಥಿನಿಲಯಗಳಲ್ಲಿಯೇ ಒಂದು ವಾರ ಹೋಂ ಕ್ವಾರಂಟೈನ್‌ನಲ್ಲಿಯೇ ಇರಬೇಕು. ಪ್ರತಿದಿನ ಅವರ ಬಗ್ಗೆ ನಿಗಾ ವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ತಪಾಸಣೆಗೆ ಮತ್ತಷ್ಟು ಕ್ರಮ ಕೈಗೊಳ್ಳಬೇಕು, ಕೋವಿಡ್ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಬೇಕು. ಸೋಂಕಿತರು ಅನಗತ್ಯವಾಗಿ ಓಡಾಡುವುದು ಕಂಡುಬಂದಲ್ಲಿ ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಒಂದೇ ಕುಟುಂಬದಲ್ಲಿ 2ಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಮನೆಯನ್ನು ಮೈಕ್ರೋ ಕಂಟೈನ್‌ಮೆಂಟ್ ಝೋನ್ ಎಂದು ಪರಿಗಣಿಸಬೇಕು ಎಂದರು.

ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10 ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಬೇಕು. ಮದುವೆ ಕಾರ್ಯಕ್ರಮಗಳಿಗೆ ಕೇವಲ 50 ಜನರು ಮಾತ್ರ ಸೀಮಿತಗೊಳಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದಲ್ಲಿ ಕಲ್ಯಾಣ ಮಂಟಪಗಳ ಮಾಲಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದರು. ಇದರ ಬಗ್ಗೆ ನಿಗಾ ವಹಿಸಲು ಹೋಂ ಗಾರ್ಡ್‌ನ್ನು ನಿಯೋಜಿಸಬೇಕು ಎಂದರು.

ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವಂತಹ ಸಾರ್ವಜನಿಕರ ಮೇಲೆ ದಂಡ ವಿಧಿಸಬೇಕು. ಕಡ್ಡಾಯವಾಗಿ ಮಸ್ಕ್ ಧರಿಸುವಂತೆ ತಿಳಿಸಬೇಕು. ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಅವರಲ್ಲಿ ಅರಿವು ಮೂಡಿಸಬೇಕು ಎಂದರು.

ಕೋವಿಡ್ ಸೋಂಕಿತರು ಹೋಂ ಕ್ವಾರಂಟೈನ್‌ನಲ್ಲಿ ಇರುವ ಬಗ್ಗೆ ಸಂಬಂಧಿಸಿದ ತಹಶೀಲ್ದಾರ್‌ಗಳು ಮತ್ತು ತಾಲೂಕು ವೈದ್ಯಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಬೇಕು. ಕೋವಿಡ್ ಲಸಿಕೆಯನ್ನು ತೆಗೆದುಕೊಳ್ಳುವಂತಹ ಸ್ಥಳಗಳಲ್ಲಿ ಜನಸಂದಣಿ ಕಂಡುಬರುತ್ತಿದ್ದೂ ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಶೇ.60 ಆನ್‌ಲೈನ್ ನೋಂದಣಿ ಮತ್ತು ಶೇ.40 ನೇರವಾಗಿ ಹಾಗೂ 18 ವರ್ಷ ಮೇಲ್ಟಟ್ಟವರಿಗೆ ಶೇ.80 ಆನ್‌ಲೈನ್ ನೋಂದಣಿ ಮತ್ತು ಶೇ.20 ನೇರವಾಗಿ ಲಸಿಕೆಯನ್ನು ನೀಡಬೇಕು ಎಂದು ತಿಳಿಸಿದರು.

ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಜಿಪಂ ಸಿಇಒ ಡಾ. ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಷ್ ಭಗವಾನ್ ಸೋನಾವಣೆ ಹಾಗೂ ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ವೇದಿಕೆಯಲ್ಲಿದ್ದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಸೇರಿದಂತೆ ಉಪವಿಭಾಗಾಧಿಕಾರಿ, ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News