ಚಿಕ್ಕಮಗಳೂರು: ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾ ವಹಿಸಲು ಡಿಸಿಗೆ ಸಿಎಂ ಸೂಚನೆ

Update: 2021-07-31 16:24 GMT

ಚಿಕ್ಕಮಗಳೂರು, ಜು.31; ಹೊರ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಮೇಲೆ ನಿಗಾ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ  ಸೂಚನೆ ನೀಡಿದರು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಶನಿವಾರ ಆಯ್ದ 8 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕೇರಳ ಹಾಗೂ ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೆ ಒಳಪಡಿಸಬೇಕು. ಆರ್.ಟಿ.ಪಿ.ಸಿ.ಆರ್ ಟೆಸ್ಟ್‍ನ ವರದಿ ಮತ್ತು 2 ಬಾರಿ ಲಸಿಕೆ ಪಡೆದಿರುವಂತಹ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲೆಗೆ ಆಗಮಿಸಲು ಅನುಮತಿ ನೀಡಬೇಕು ಎಂದು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯು ಪ್ರವಾಸಿ ತಾಣವಾಗಿದ್ದು, ಪ್ರವಾಸಿಗರು ಹೆಚ್ಚಿನ ಸಂಖೈಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ಹೋಂಸ್ಟೇಗಳು, ಹೋಟೆಲ್ ಹಾಗೂ ರೆಸಾರ್ಟ್‍ಗಳಲ್ಲಿ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದರ ಜೊತೆಗೆ 72 ಗಂಟೆ ಮುಂಚಿತವಾಗಿ ಮಾಡಿಸಿದಂತಹ ಆರ್.ಟಿ.ಪಿ.ಸಿ.ಆರ್ ಟೆಸ್ಟ್‍ನ ವರದಿ ಮತ್ತು 2 ಬಾರಿ ಲಸಿಕೆ ಪಡೆದಿರುವಂತಹ ದಾಖಲೆಗಳನ್ನು ಪರಿಶೀಲನೆ ಮಾಡಿ ನಂತರ ಹೋಂಸ್ಟೇಗಳು, ಹೋಟೆಲ್ ಹಾಗೂ ರೆಸಾರ್ಟ್‍ಗಳಲ್ಲಿ ಪರಿಶೀಲಿಸಿ ಒಳಗೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದರು.

ರಾಜ್ಯದಲ್ಲಿನ ಪಾಸಿಟಿವ್ ದರಕ್ಕಿಂತ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಿದ್ದು, ಕೋವಿಡ್ ಪಾಸಿಟಿವ್ ದರವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದ ಅವರು ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳಿರುವ ತಾಲ್ಲೂಕುಗಳನ್ನು ಗುರುತಿಸಿ ಸೂಕ್ಷ್ಮ ವಲಯಗಳಾಗಿ ವಿಂಗಡಿಸಿ ಅವುಗಳ ಮೇಲೆ ನಿಗಾ ವಹಿಸುವಂತೆ ತಿಳಿಸಿದರು.

ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸರ್ಕಾರದ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವುದರ ಮೂಲಕ ಕೋವಿಡ್‍ನಿಂದ ದೂರವಿರುವಂತೆ ತಿಳಿಸಿದ ಅವರು  ಆರ್.ಟಿ.ಪಿ.ಸಿ.ಆರ್ ಟೆಸ್ಟ್‍ಗಳನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಜಿಲ್ಲೆಯ ಸುತ್ತಮುತ್ತಲಿನ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವ ಮೂಲಕ ಬೇರೆ ರಾಜ್ಯಗಳಿಂದ ಬರುವವರ ಮೇಲೂ ನಿಗಾ ವಹಿಸಬೇಕು ಎಂದ ಅವರು ಜಿಲ್ಲೆಯನ್ನು ಪ್ರವೇಶಿಸುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಹಾಗೂ ಆಕ್ಸಿಜನ್ ಉತ್ಪಾದನಾ ಘಟಕಗಳ ಕಾಮಗಾರಿಗಳನ್ನು ಶೀಘ್ರ ಗತಿಯಲ್ಲಿ ಪೂರ್ಣಗೊಳಿಸಬೇಕು ಮತ್ತು ಸಾರ್ವಜನಿಕರಿಗೆ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಸೂಚನೆ ನೀಡಿದರು. 

ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಇದುವರೆಗೂ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತ ಮಾಹಿತಿಯನ್ನು ಮುಖ್ಯಮಂತ್ರಿಗೆ ನೀಡಿದರು. ಸಭೆಯಲ್ಲಿ ಜಿಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್.ಎಚ್.ಅಕ್ಷಯ್, ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪಾ, ಜಿಲ್ಲಾ ಸರ್ಜನ್ ಮೋಹನ್, ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News