ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಪ್ಪಟ್ಟು ಶುಲ್ಕ ವಸೂಲಿ ಆರೋಪ : ಪ್ರತಿಭಟನೆ

Update: 2021-08-02 12:50 GMT

ಕುಂದಾಪುರ, ಆ.2: ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ದುಪ್ಪಟ್ಟು ಶುಲ್ಕ ವಸೂಲಾತಿಯನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶ್(ಎಸ್‌ಎಫ್‌ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ಕುಂದಾಪುರ ತಾಲೂಕು ಸಮಿತಿಯ ನೇತೃತ್ವದಲ್ಲಿ ಸೋಮವಾರ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ಉಪಾಧ್ಯಕ್ಷ ಸುರೇಶ್ ಕಲ್ಲಾಗರ, ಇಡೀ ದೇಶವನ್ನು ವ್ಯಾಪಿಸಿರುವ ಕೊರೋನಾ ಮಹಾಮಾರಿ ದುಡಿಯುವ ಜನರಿಗೆ ಆದಾಯವೇ ಇಲ್ಲದಂತೆ ಮಾಡಿದೆ. ಇಂತಹ ಸಂದರ್ಭ ದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಮಾನವೀಯತೆ ಇಲ್ಲದೇ ಪೋಷಕರನ್ನು ಪೀಡಿಸಿ ಶುಲ್ಕ ವಸೂಲಾತಿ ಮಾಡುತ್ತಿರುವುದು ಸರಿಯಲ್ಲ ಎಂದು ತಿಳಿಸಿದರು.

ಬಹುತೇಕ ಶಾಲಾ ಕಾಲೇಜುಗಳು ಡೊನೇಶನ್ ಹಣ ಕೊಡದಿದ್ದರೆ ಆನ್ ಲೈನ್ ತರಗತಿಯನ್ನು ಸ್ಥಗಿತ ಮಾಡುವುದಾಗಿ ಬೆದರಿಸುತ್ತಿವೆ. ಸಂವಿಧಾನ ನಮಗೆ ಶಿಕ್ಷಣದ ಹಕ್ಕನ್ನು ನೀಡಿದೆ. ಆದರೆ ಸಂವಿಧಾನಕ್ಕೆ ವಿರುದ್ದವಾಗಿ ಸರಕಾರದ ಆಶಯಗಳಿಗೆ, ಶಿಕ್ಷಣ ಇಲಾಖೆಯ ಸುತ್ತೋಲೆಗಳಿಗೆ ವಿರುದ್ದವಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳು ಅಮಾನವೀಯತೆಯಿಂದ ನಡೆದುಕೊಳ್ಳುತ್ತಿದೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.

ಬಳಿಕ ಈ ಕುರಿತು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌ಕೆ ಪದ್ಮನಾಭ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಡಿವೈಎಫ್‌ಐ ತಾಲೂಕು ಅಧ್ಯಕ್ಷ ರಾಜೇಶ ವಡೇರಹೋಬಳಿ, ಮುಖಂಡರಾದ ಉದಯ್ ಟೈಲರ್, ರವಿ ವಿಎಂ, ಕಟ್ಟಡ ಕಾರ್ಮಿಕ ಸಂಘಟನೆಯ ಸಂತೋಷ ಹೆಮ್ಮಾಡಿ, ಪೋಷಕರಾದ ಚಂದ್ರಶೇಖರ ದೇವಾಡಿಗ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News