ಬೆಂಗಳೂರು: ಕೋವಿಡ್ ನಿಯಮ ಪಾಲಿಸದಿದ್ದರೆ ಪ್ರಕರಣ ದಾಖಲು; ರಾಕೇಶ್‍ಸಿಂಗ್

Update: 2021-08-02 13:43 GMT

ಬೆಂಗಳೂರು, ಆ.2: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸದಿದ್ದಲ್ಲಿ ದಂಡ ಹಾಗೂ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುವ ಸಂಬಂಧ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜೊತೆ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ತಳಮಟ್ಟದಲ್ಲಿ ಸರಿಯಾಗಿ ಕೆಲಸ ಮಾಡಬೇಕು. ಆಯಾ ವಲಯ ಮಟ್ಟದಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದ್ದಾರೆ.

ನಗರದಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ಪಾಲಿಕೆ ಹಾಗೂ ಪೊಲಿಸ್ ಇಲಾಖೆಗಳು ಸಮನ್ವಯದೊಂದಿಗೆ ಎಲ್ಲಾ ನಾಗರಿಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಲು ಜಾಗೃತಿ ಮುಡಿಸಬೇಕು. ಜಾಗೃತಿ ಮುಡಿಸಿದ ಬಳಿಕವೂ ನಿಯಮ ಪಾಲಿಸದಿದ್ದರೆ ಪ್ರಕರಣ ದಾಖಲಿಸಲಾಗುವುದೆಂದು ಅವರು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಮಾತನಾಡಿ, ನಗರದಲ್ಲಿ ರಾತ್ರಿ 10 ಗಂಟೆಯಿಂದ ಮುಂಜಾನೆ 5 ಗಂಟೆಯವರೆಗೆ ರಾತ್ರಿ ಕಫ್ರ್ಯೂ ಜಾರಿಯಾಗಿದ್ದು, ಅದನ್ನು ಸರಿಯಾಗಿ ಅನುಸರಿಸಬೇಕಿದೆ. ಅದಕ್ಕೆ ಪೊಲೀಸ್ ಸಹಕಾರ ಪ್ರಮುಖವಾಗಿದೆ ಎಂದು ತಿಳಿಸಿದ್ದಾರೆ.

ನಗರದ ಮಾರುಕಟ್ಟೆ, ಮಾಲ್, ಹೋಟೆಲ್, ದೇವಸ್ಥಾನ, ರೆಸ್ಟೋರೆಂಟ್ ಸೇರಿದಂತೆ ಇನ್ನಿತರೆ ಕಡೆ ಹೆಚ್ಚು ಜನಸಂದಣಿಯಾಗುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಪಾಲಿಸದಿರುವ ಕಡೆ ಪಾಲಿಕೆಯ ಅಧಿಕಾರಿಗಳ ತಂಡವು ಪೊಲೀಸ್ ಸಿಬ್ಬಂದಿಯ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ದಂಡ ವಿಧಿಸಿ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಲು ಸೂಚನೆ ನೀಡಬೇಕು. ಆಯಾ ವಲಯ ಮಟ್ಟದಲ್ಲಿ ಕಠಿಣ ಕ್ರಮಗಳನ್ನು ಕೈಗೊಂಡು ಕೋವಿಡ್ ನಿಯಂತ್ರಿಸಲು ಕ್ರಮವಹಿಸಬೇಕು. ಅದಲ್ಲದೆ ಕೊವಿಡ್ ನಿಯಮಗಳನ್ನು ಪಾಲಿಸುವ ಬಗ್ಗೆ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದ್ದಾರೆ. 

ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮಾತನಾಡಿ, ಕೇರಳ ಹಾಗೂ ಮಹಾರಾಷ್ಟ್ರದಿಂದ ನಗರಕ್ಕೆ ರಸ್ತೆಗಳ ಮೂಲಕ ಆಗಮಿಸುವರನ್ನು ಚೆಕ್ ಪೋಸ್ಟ್ ಗಳ ಬಳಿ ತಪಾಸಣಾ ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, 72 ಗಂಟೆಯೊಳಗೆ ಮಾಡಿಸಿರುವ ಆರ್‍ಟಿಪಿಸಿಆರ್ ನೆಗೆಟಿವ್ ವರದಿಯನ್ನು ಪರಿಶೀಲಿಸಲಾಗುವುದು. ಆರ್‍ಟಿಪಿಸಿಆರ್ ವರದಿ ಇಲ್ಲದ್ದಿದ್ದರೆ ಸ್ವಾಬ್ ಸಂಗ್ರಹ ಮಾಡಿ ಸಾಂಸ್ಥಿಕ ಕ್ವಾರಂಟೈನ್ ನಲ್ಲಿರಿಸಲಾಗುವುದು. ಈ ಸಂಬಂಧ ಈಗಾಗಲೇ ಗ್ರಾಮಾಂತರ ಎಸ್ಪಿ ಜತೆ ಮಾತನಾಡಿದ್ದು, ತಪಾಸಣಾ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಗೊಳಿಸಲಾಗುವುದು ಎಂದು ತಿಳಿಸಿದರು. 

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ನಗರದಲ್ಲಿ ಕೋವಿಡ್ ನಿಯಂತ್ರಿಸುವ ಸಲುವಾಗಿ ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯ ಜೊತೆ  ಉತ್ತಮ ಸಮನ್ವವಿದ್ದು, ಪೊಲೀಸ್ ಇಲಾಖೆಯಿಂದ ಬೇಕಾದಂತಹ ಸಹಕಾರ ನಿಡಲಾಗುವುದು. ಕೊವಿಡ್ ನಿಯಮಗಳನ್ನು ಪಾಲಿಸದಿರುವವರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗುವುದು ಎಂದರು. 

ಸಭೆಯಲ್ಲಿ ವಲಯ ವಿಶೇಷ ಆಯುಕ್ತರುಗಳಾದ ಡಿ.ರಂದೀಪ್, ಮನೋಜ್ ಜೈನ್, ಡಾ.ಹರೀಶ್ ಕುಮಾರ್, ರವೀಂದ್ರ, ದಯಾನಂದ್, ರೆಡ್ಡಿ ಶಂಕರ ಬಾಬು, ತುಳಸಿ ಮದ್ದಿನೇನಿ, ರವೀಂದ್ರ, ಹೆಚ್ಚುವರಿ ಪೆÇಲೀಸ್ ಆಯುಕ್ತ ಮುರುಗನ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ವಲಯ ಡಿಸಿಪಿಗಳು, ಮುಖ್ಯ ಆರೋಗ್ಯ ಅಧಿಕಾರಿ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್ ನಿಯಂತ್ರಿಸುವ ಸಲುವಾಗಿ ಪಾಲಿಕೆ ವತಿಯಿಂದ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಕೊವಿಡ್ ಪಾಸಿಟಿವ್ ಬಂದವರಿಗೆ ಕಡ್ಡಾಯವಾಗಿ ಫಿಸಿಕಲ್ ಟ್ರಯಾಜ್ ಮಾಡುವುದು, ಕಾಂಟ್ಯಾಕ್ಟ್ ಟ್ರೇಸಿಂಗ್, ಐಸೋಲೇಟ್, 3 ಹಾಗೂ ಅದಕ್ಕಿಂತ ಹೆಚ್ಚು ಕೇಸ್ ಕಂಡುಬಂದ ಪ್ರದೇಶವನ್ನು ಕಂಟೈನ್ಮೆಂಟ್ ವಲಯವನ್ನಾಗಿ ಗುರುತಿಸುವುದು ಮಾಡಲಾಗುತ್ತಿದೆ.

-ಗೌರವ್‍ಗುಪ್ತ, ಮುಖ್ಯ ಆಯುಕ್ತರು, ಬಿಬಿಎಂಪಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News