ಗಡಿಭಾಗದ ಮದ್ಯದಂಗಡಿ ಮುಚ್ಚಲು ದ.ಕ. ಜಿಲ್ಲಾಧಿಕಾರಿ ಆದೇಶ

Update: 2021-08-03 14:45 GMT
ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ 

ಮಂಗಳೂರು: ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯದಂಗಡಿಗಳನ್ನು ಆ.3ರಿಂದ 15ರವರೆಗೆ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಈ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ನಿರ್ದೇಶನ ನೀಡಲಾಗಿದ್ದು, ನಿಷೇಧಾಜ್ಞೆ ಜಾರಿಗೊಂಡಿರುವ ಸಮಯದಲ್ಲಿ ಆ ವ್ಯಾಪ್ತಿಗೊಳಪಟ್ಟ ವೈನ್‌ಶಾಪ್ ಅಥವಾ ಬಾರ್‌ಗಳ ಮುಂದಿನ ಮತ್ತು ಹಿಂದಿನ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು (ಸೀಲು) ಗಳನ್ನು ಹಾಕಿ ಕಡ್ಡಾಯವಾಗಿ ಮುಚ್ಚುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೋವಿಡ್-19 ಸೋಂಕು ನಿಯಂತ್ರಣಕ್ಕೆ ರಾಜ್ಯ ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಕಣ್ಗಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೆೀಷ ಸರ್ವೇಕ್ಷಣೆಗೆ ನಿರ್ದೇಶಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಸಾರ್ವಜನಿಕರು ಮದ್ಯ ಸೇವನೆಗೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗಗಳ ಮದ್ಯದಂಗಡಿಗಳನ್ನೇ ಅವಲಂಬಿಸಿರುವುದರಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಗಳು ಇದೆ. ಈ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News