ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಸಲು ಕೋರಿ ಹೈಕೋರ್ಟ್‍ಗೆ ಪಿಐಎಲ್ ಸಲ್ಲಿಕೆ

Update: 2021-08-04 14:21 GMT

ಬೆಂಗಳೂರು, ಆ.4: ರಾಜ್ಯದ ಎಲ್ಲ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಅರಿಯಲು ನಡೆಸಲಾಗಿರುವ ಸಮೀಕ್ಷೆಯ (ಜಾತಿ ಗಣತಿ) ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿದೆ.

ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಗೌರವಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಸೇರಿ 12ಕ್ಕೂ ಹೆಚ್ಚು ವಿವಿಧ ಹಿಂದುಳಿದ ವರ್ಗಗಳ ಸಂಘ-ಸಂಸ್ಥೆಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಎನ್.ಎಸ್. ಸಂಜಯ್ ಗೌಡ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ಸಂಬಂಧ ರಾಜ್ಯ ಸರಕಾರ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿತು. ಜೊತೆಗೆ ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಇತ್ತೀಚಿಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನ ಆಧಾರದಲ್ಲಿ ಈ ಅರ್ಜಿ ಪರಿಗಣಿಸಬೇಕಾಗಿದೆ ಎಂದು ಹೇಳಿ ವಿಚಾರಣೆಯನ್ನು ಸೆ.8ಕ್ಕೆ ಮುಂದೂಡಿತು. ಅರ್ಜಿದಾರರ ಪರ ಅರ್ಣವ್ ಬಾಗಲವಾಡಿ ವಾದ ಮಂಡಿಸಿದರು.

ಜಾತಿಗಳ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ 2013ರಲ್ಲಿ ಬಜೆಟ್‍ನಲ್ಲಿ ಘೋಷಿಸಲಾಗಿತ್ತು. ಹಿಂದುಳಿದ ವರ್ಗಗಳ ಆಯೋಗಕ್ಕೆ ಸಮೀಕ್ಷೆಯನ್ನು ವಹಿಸಿ 2014ರಲ್ಲಿ ಸರಕಾರ ಆದೇಶ ಹೊರಡಿಸಿತ್ತು. 162 ಕೋಟಿ ರೂ. ವೆಚ್ಚ ಮಾಡಿ ಸಮೀಕ್ಷೆ ನಡೆಸಲಾಗಿದ್ದು, 2015ರಲ್ಲಿ ವರದಿ ಸಿದ್ಧಗೊಂಡಿದೆ. ಆದರೆ, ಆರು ವರ್ಷ ಕಳೆದರೂ ಈವರೆಗೆ ಸರಕಾರಕ್ಕೆ ವರದಿ ಸಲ್ಲಿಕೆಯಾಗಿಲ್ಲ. ಸಾರ್ವಜನಿಕವಾಗಿ ಇದರ ಮಾಹಿತಿ ಲಭ್ಯವಿಲ್ಲ. ಸಾಕಷ್ಟು ಬಾರಿ ಸರಕಾರ ಹಾಗೂ ಆಯೋಗಕ್ಕೆ ಮನವಿ ಮಾಡಲಾಗಿದ್ದರೂ ಪ್ರಯೋಜನವಾಗಿಲ್ಲ. ಕರ್ತವ್ಯ ನಿರ್ವಹಣೆಯಲ್ಲಿ ಸರಕಾರ ಹಾಗೂ ಆಯೋಗ ವಿಫಲವಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಹೀಗಾಗಿ, ಸಮೀಕ್ಷಾ ವರದಿಯನ್ನು ಸರಕಾರಕ್ಕೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಆಯೋಗಕ್ಕೆ ನಿರ್ದೇಶನ ನೀಡಬೇಕು. ಆಯೋಗ ಸಲ್ಲಿಸುವ ವರದಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ರಾಜ್ಯ ಸರಕಾರಕ್ಕೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News