ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ದೂರು

Update: 2021-08-04 14:43 GMT

ಬೆಂಗಳೂರು, ಆ.4: ಕಾಂಗ್ರೆಸ್ ಪಕ್ಷವೂ ಭಯೋತ್ಪಾದಕರ ಪರ ನಿಂತಿದೆ ಎಂದು ವಿವಾದಿತ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೆಪಿಸಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ.

ಬುಧವಾರ ಇಲ್ಲಿನ ಹೈಗ್ರೌಂಡ್ಸ್ ಠಾಣಾ ಪೊಲೀಸರಿಗೆ ದೂರು ನೀಡಿದ ಕಾಂಗ್ರೆಸ್ ನಾಯಕ ವೈ.ಪುಟ್ಟರಾಜು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಅವರು ಕಾಂಗ್ರೆಸ್ ಪಕ್ಷ ಹಾಗೂ ಎಐಸಿಸಿ ಅಧ್ಯಕ್ಷರ ಮೇಲೆ ಆಧಾರರಹಿತ ಆರೋಪ ಮಾಡಿದ್ದಲ್ಲದೆ, ಯುಪಿಎ ಆಡಳಿತ ಅವಧಿಯಲ್ಲಿ ಹಿಂದೂಗಳ ವಿರುದ್ಧ ಮಸೂದೆ ತಂದಿದ್ದರು ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಇದೀಗ ಭಯೋತ್ಪಾದಕರ ಪರ ನಿಂತಿದ್ದಾರೆಂದು ವಿವಾದಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

ಇನ್ನು, ನಳಿನ್ ಕಟೀಲ್ ತಮ್ಮ ಪಕ್ಷದ ರಾಜಕೀಯ ಲಾಭಕ್ಕಾಗಿ ಹಾಗೂ ಕೇಂದ್ರ ಮತ್ತು ರಾಜ್ಯ ಸರಕಾರಗಳ ವೈಫಲ್ಯಗಳನ್ನು ಮರೆಮಾಚಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದು, ಜನರಿಗೆ ಕಾಂಗ್ರೆಸ್ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ. ಹಾಗಾಗಿ, ಇವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಎಸ್.ಮನೋಹರ್, ಆನಂದ್, ಎಂ.ಎ.ಸಲೀಂ ಸೇರಿದಂತೆ ಪ್ರಮುಖರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News