ಸಚಿವ ಸಂಪುಟ ಸೇರಿದ ಹೊಸ ಮುಖಗಳ ಪರಿಚಯ

Update: 2021-08-04 15:17 GMT

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸ್ಥಾನ ಪಡೆದಿರುವ ಹೊಸ ಮುಖಗಳ ನೂತನ ಸಚಿವರ ಪರಿಚಯ ಇಲ್ಲಿದೆ. 

► ವಿ.ಸುನೀಲ್ ಕುಮಾರ್: ಸಂಘಪರಿವಾರದ ವಿದ್ಯಾರ್ಥಿ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಮೂಲಕ ರಾಜಕೀಯ ಜೀವನಕ್ಕೆ ಕಾಲಿರಿಸಿದ ವಿ.ಸುನೀಲ್ ಕುಮಾರ್, 2004ರಲ್ಲಿ ಬಿಜೆಪಿ ಸೇರ್ಪಡೆಯಾದರು. ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 2004ರಲ್ಲಿ ಮೊದಲ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಎಚ್.ಗೋಪಾಲ ಭಂಡಾರಿ ವಿರುದ್ಧ ಗೆಲುವು ಸಾಧಿಸಿದರು.

2008ರ ವಿಧಾನಸಭಾ ಚುನಾವಣೆಯಲ್ಲಿ ಎಚ್.ಗೋಪಾಲ ಭಂಡಾರಿ ವಿರುದ್ಧ ಎರಡನೆ ಬಾರಿ ಸ್ಪರ್ಧಿಸಿ ಪರಾಭವಗೊಂಡರು. ಡಿ.ವಿ.ಸದಾನಂದಗೌಡರಿಂದ ತೆರವಾಗಿದ್ದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ 2012ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ಸೋಲು ಅನುಭವಿಸಿದರು.

2013ರ ವಿಧಾನಸಭಾ ಚುನಾವಣೆಯಲ್ಲಿ ಪುನಃ ಚುನಾಯಿತರಾದ ಸುನೀಲ್ ಕುಮಾರ್, ವಿರೋಧ ಪಕ್ಷದ ಮುಖ್ಯಸಚೇತಕರಾಗಿ ಸೇವೆ ಸಲ್ಲಿಸಿದ್ದಾರೆ. 2018ರ ಚುನಾವಣೆಯಲ್ಲಿ ಗೋಪಾಲ ಭಂಡಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಮೂರನೆ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. 2019ರಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರ ರಚನೆಯಾದಾಗ ಸಚಿವ ಸ್ಥಾನಕ್ಕೆ ಸುನೀಲ್ ಕುಮಾರ್ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಆದರೆ, ಅದೃಷ್ಟ ಕೈ ಹಿಡಿದಿರಲಿಲ್ಲ. 2020ರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸುನೀಲ್ ಕುಮಾರ್ ಅವರನ್ನು ಕೇರಳ ರಾಜ್ಯ ಬಿಜೆಪಿ ಘಟಕದ ಸಹ ಉಸ್ತುವಾರಿಯಾಗಿ ನೇಮಕ ಮಾಡಿದರು.

ಇದೀಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ಮೊಟ್ಟ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

► ಅರಗ ಜ್ಞಾನೇಂದ್ರ: 1983 ಹಾಗೂ 1985ರಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವ. 1986ರಲ್ಲಿ ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಕೃಷಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಕೆ. 1989ರಲ್ಲಿ ಮೂರನೆ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವ. 1994ರಲ್ಲಿ ನಾಲ್ಕನೆ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಚೊಚ್ಚಲ ಗೆಲುವು ದಾಖಲಿಸಿದರು. 1999 ಹಾಗೂ 2004ರಲ್ಲಿ ಪುನಃ ಗೆಲುವು. 2009ರ ಚುನಾವಣೆಗೆ ಸೋಲು. 2009ರಲ್ಲಿ ಭದ್ರಾವತಿಯಲ್ಲಿರುವ ಮೈಸೂರು ಪೇಪರ್ ಮಿಲ್ಸ್‍ನ ಅಧ್ಯಕ್ಷರಾಗಿ ಆಯ್ಕೆ.

2013ರ ವಿಧಾನಸಭಾ ಚುನಾವಣೆಯಲ್ಲಿ ಪುನಃ ಸೋಲು ಅನುಭವಿಸಿದ ಅರಗ ಜ್ಞಾನೇಂದ್ರ, 2018ರ ಚುನಾವಣೆಯಲ್ಲಿ ಮತ್ತೆ ಗೆಲುವು ಸಾಧಿಸಿ ವಿಧಾನಸಭೆ ಪ್ರವೇಶಿಸಿದರು. ಇದೀಗ ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
► ಮುನಿರತ್ನ: ಚಲನಚಿತ್ರ ನಿರ್ಮಾಪಕರಾದ ಮುನಿರತ್ನ, 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿ ವಿಧಾನಸಭೆ ಪ್ರವೇಶ. 2018ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎರಡನೆ ಬಾರಿ ಗೆಲುವು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಿಜೆಪಿ ಸೇರ್ಪಡೆ. 2020ರಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ದಾಖಲು.

►ಬಿ.ಸಿ.ನಾಗೇಶ್: ಸಂಘಪರಿವಾರದ ವಿದ್ಯಾರ್ಥಿ ಘಟಕ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‍ನಲ್ಲಿ ಸಕ್ರಿಯರಾಗಿದ್ದ ಬಿ.ಸಿ.ನಾಗೇಶ್, 1984ರಿಂದಲೂ ಬಿಜೆಪಿ ಪಕ್ಷದ ಜೊತೆ ಗುರುತಿಸಿಕೊಂಡಿದ್ದಾರೆ. ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಎರಡನೆ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಯಡಿಯೂರಪ್ಪ ಸರಕಾರದಲ್ಲಿಯೇ ಸಚಿವ ಸ್ಥಾನಕ್ಕೆ ಇವರ ಹೆಸರು ಕೇಳಿ ಬಂದಿತ್ತು. ಇದೀಗ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಮೊದಲ ಬಾರಿಗೆ ಸಚಿವರಾಗುವ ಅವಕಾಶ ಸಿಕ್ಕಿದೆ.

ಯಡಿಯೂರಪ್ಪ ಹಾಗೂ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿಶ್ವಾಸಕ್ಕೆ ಪಾತ್ರರಾಗಿರುವ ಬಿ.ಸಿ.ನಾಗೇಶ್, ಬ್ರಾಹ್ಮಣ ಸಮುದಾಯಕ್ಕೆ ಸೇರಿದ್ದರೂ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ಪ್ರಾಬಲ್ಯವಿರುವ ತಿಪಟೂರು ಕ್ಷೇತ್ರದಲ್ಲಿ ಜನರ ವಿಶ್ವಾಸಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ.

► ಹಾಲಪ್ಪ ಆಚಾರ್: 70 ವರ್ಷ ಪ್ರಾಯದ ಹಾಲಪ್ಪ ಆಚಾರ್, 2018ರಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಬಸವರಾಜ ರಾಯರಡ್ಡಿ ವಿರುದ್ಧ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಚನೆಯಾಗಿರುವ ಮಂತ್ರಿಮಂಡಲದಲ್ಲಿ ಅತ್ಯಂತ ಹಿರಿಯ ಸಚಿವರಾಗಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
 
► ಶಂಕರ ಪಾಟೀಲ್ ಮುನೇನಕೊಪ್ಪ: ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದ ಶಂಕರ ಪಾಟೀಲ್ ಮುನೇನಕೊಪ್ಪ 1989ರಲ್ಲಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸಿದರು. ಜನತಾದಳ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾರೆ. 2008ರವರೆಗೆ ಜನತಾದಳದಲ್ಲಿಯೆ ಸಕ್ರಿಯವಾಗಿದ್ದ ಅವರು, ಕರ್ನಾಟಕ ರೈಲ್ವೆ ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. 2008ರಲ್ಲಿ ಬಿಜೆಪಿ ಸೇರ್ಪಡೆಯಾದ ಅವರು, ನವಲಗುಂದ ಕ್ಷೇತ್ರದಿಂದ ಸ್ಪರ್ಧಿಸಿ ಚುನಾಯಿತರಾದರು. ಆದರೆ, 2013ರಲ್ಲಿ ಜೆಡಿಎಸ್ ಅಭ್ಯರ್ಥಿ ಎನ್.ಎಚ್.ಕೋನರೆಡ್ಡಿ ವಿರುದ್ಧ ಸೋಲು ಅನುಭವಿಸಿದರು. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುನಃ ಗೆಲುವು ಸಾಧಿಸುವ ಮೂಲಕ ಎರಡನೆ ಬಾರಿ ವಿಧಾನಸಭೆ ಪ್ರವೇಶಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News