ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ಪ್ರಶಾಂತ್ ಕಿಶೋರ್ ರಾಜೀನಾಮೆ

Update: 2021-08-05 04:48 GMT

ಹೊಸದಿಲ್ಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

"ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳಲು ಬಯಸುತ್ತೇನೆ" ಎಂದು ಪಂಜಾಬ್ ಸಿಎಂಗೆ ಬರೆದ ಪತ್ರದಲ್ಲಿ ಪ್ರಶಾಂತ್ ಕಿಶೋರ್ ತಿಳಿಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರು ತಮ್ಮ ಮುಂದಿನ ಕ್ರಮದ ಬಗ್ಗೆ ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದರು.

"ನಿಮಗೆ ತಿಳಿದಿರುವಂತೆ, ಸಾರ್ವಜನಿಕ ಜೀವನದಲ್ಲಿ ಸಕ್ರಿಯ ಪಾತ್ರದಿಂದ ತಾತ್ಕಾಲಿಕ ವಿರಾಮ ತೆಗೆದುಕೊಳ್ಳುವ ನನ್ನ ನಿರ್ಧಾರದ ದೃಷ್ಟಿಯಿಂದ, ನಿಮ್ಮ ಪ್ರಧಾನ ಸಲಹೆಗಾರನಾಗಿ ನಾನು ಜವಾಬ್ದಾರಿಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ನನ್ನ ಮುಂದಿನ ಹೆಜ್ಜೆಯ ಬಗ್ಗೆ ನಾನು ಇನ್ನೂ ತೀರ್ಮಾನಿಸದ ಕಾರಣ ಈ ಜವಾಬ್ದಾರಿಯಿಂದ ನನ್ನನ್ನು ಮುಕ್ತಗೊಳಿಸುವಂತೆ ವಿನಂತಿಸಲು ನಾನು ಬಯಸುತ್ತೇನೆ "ಎಂದು ಪ್ರಶಾಂತ್ ಕಿಶೋರ್ ಪತ್ರದಲ್ಲಿ ಬರೆದಿದ್ದಾರೆ.

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ವದಂತಿ  ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಪ್ರಶಾಂತ್ ಕಿಶೋರ್ ಕಳೆದ ತಿಂಗಳು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಭೇಟಿ ಮಾಡಿದ್ದರು.

ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೂಡ ಪಕ್ಷದ ಹಿರಿಯ ನಾಯಕರೊಂದಿಗೆ ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಪಕ್ಷಕ್ಕೆ ಸೇರುವ ಸಾಧಕ -ಬಾಧಕಗಳ ಬಗ್ಗೆ ಚಿಂತನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News