×
Ad

​ಉಡುಪಿ: ಸ್ವಾತಂತ್ರೋತ್ಸವ ಆಚರಣೆಗೆ ಪೂರ್ವಭಾವಿ ಸಭೆ

Update: 2021-08-07 20:33 IST

ಉಡುಪಿ, ಆ.7: ಮುಂದಿನ ಆ.15ರಂದು ಉಡುಪಿ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಭಾವಿ ಸಭೆ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮಾರ್ಗಸೂಚಿಯಂತೆ ಆಚರಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಸುರಕ್ಷಿತಾ ಅಂತರ ಪಾಲಿಸುವಂತೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸುವಂತೆ ಹಾಗೂ ಸ್ಯಾನಟೈಸರ್ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಎಲ್ಲಾ ವಿಭಾಗದ ಕೋವಿಡ್ ವಾರಿಯರ್ಸ್‌ಗಳನ್ನು ಗುರುತಿಸಿ ಅವರನ್ನು ಸನ್ಮಾನಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮವನ್ನು ಸಾರ್ವಜನಿಕರು ವೀಕ್ಷಿಸಲು ಅನುಕೂಲವಾಗುವಂತೆ ವೆಬ್ ಕಾಸ್ಟಿಂಗ್ ಮೂಲಕ ಪ್ರಸಾರ ಮಾಡಲು ಅಗತ್ಯಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಪೊಲೀಸ್, ಅಗ್ನಿಶಾಮಕ, ಎಎನ್‌ಎಫ್, ಕರಾವಳಿ ಕಾವಲು ಪಡೆ, ಅಬಕಾರಿ, ಅರಣ್ಯ ಇಲಾಖೆಗಳಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸುವಂತೆ ತಿಳಿಸಿದ ಅವರು, ಕಾರ್ಯಕ್ರಮದ ಆಯೋಜನೆಗಾಗಿ ವಿವಿಧ ಅಧಿಕಾರಿಗಳ ನೇತೃತ್ವದ ವಿವಿಧ ಸಮಿತಿಗಳನ್ನು ರಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News