ಕಲಬುರಗಿ ಸೇರಿ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ ಆಯೋಗ
ಕಲಬುರಗಿ : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ. 3 ರಂದು ಮತದಾನ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ಈ ಮೂರು ಮಹಾನಗರ ಪಾಲುಕೆಗಳ ಅವಧಿ 2018ರಲ್ಲಿ ಮುಗಿದಿತ್ತು. ಕ್ಷೇತ್ರ ಪುನರ್ ವಿಂಗಡಣೆ ಹಾಗೂ ವಾಡ್೯ ಮೀಸಲಾತಿಯನ್ನು ಹೈಕೋಟ್೯ ನಲ್ಲಿ ಪ್ರಶ್ನೆ ಮಾಡಿದ್ದರಿಂದ ಚುನಾವಣೆ ನೆನೆಗುದಿಗೆ ಬಿದ್ದಿತ್ತು.
ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರಸಭೆ ಹಾಗೂ ಚಿಕ್ಕಮಗಳೂರು ಜಿಲ್ಲೆಯ ತರಿಕೇರೆ ಪುರಸಭೆಗೂ ಇದೇ ಅವಧಿಯಲ್ಲಿ ಚುನಾವಣೆ ನಡೆಯಲಿದೆ.