ಕೆಜಿಎಫ್ ಬಳಿ ತಲೆ ಎತ್ತಲಿದೆ ಬೃಹತ್ ಕೈಗಾರಿಕಾ ಟೌನ್ ಶಿಪ್: ಸಚಿವ ಮುರುಗೇಶ್ ನಿರಾಣಿ

Update: 2021-08-11 13:52 GMT

ಹೊಸದಿಲ್ಲಿ, ಆ.11: ಕೋಲಾರ ಜಿಲ್ಲೆ ಕೆಜಿಎಫ್‍ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಯಲ್ಲಿ ಬಳಕೆಯಾಗದೆ ಇರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ಪ್ರಾರಂಭಿಸಲು ಅನುಮತಿ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಈ ಸಂಬಂಧ ಬುಧವಾರ ಹೊಸದಿಲ್ಲಿಯಲ್ಲಿ ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮುರುಗೇಶ್ ನಿರಾಣಿ, ಕೆಜಿಎಫ್‍ನಲ್ಲಿ ಟೌನ್‍ಶಿಪ್ ನಿರ್ಮಾಣದ ಅಗತ್ಯತೆಯನ್ನು ಮನವರಿಕೆ ಮಾಡಿಕೊಟ್ಟರು.
ಕೆಜಿಎಫ್‍ನ ಭಾರತ್ ಗೋಲ್ಡ್ ಮೈನ್ಸ್ ಲಿಮಿಟೆಡ್ ವ್ಯಾಪ್ತಿಗೆ ಬರುವ ಸುಮಾರು 3212 ಎಕರೆ ಪ್ರದೇಶದಲ್ಲಿ ಕೇಂದ್ರ ಸರಕಾರವು ಡ್ರೋಣ್ ಮೂಲಕ ಸಮೀಕ್ಷೆ ನಡೆಸಿದ್ದು, ಇಲ್ಲಿ ಗಣಿಗಾರಿಕೆ ನಡೆಸಲು ಸೂಕ್ತವಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಬಳಕೆಯಾಗದೆ ಉಳಿದಿರುವ ಜಮೀನಿನಲ್ಲಿ ಕೈಗಾರಿಕಾ ಟೌನ್‍ಶಿಪ್ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಕೇಂದ್ರ ಸಚಿವರಿಗೆ ವಸ್ತುಸ್ಥಿತಿಯನ್ನು ಮುರುಗೇಶ್ ನಿರಾಣಿ ವಿವರಿಸಿದರು.

ಟೌನ್‍ಶಿಪ್ ನಿರ್ಮಾಣವಾದರೆ ಈ ಭಾಗದಲ್ಲಿ ಕೈಗಾರಿಕಾ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಅನುಕೂಲವಾಗುತ್ತದೆ. ಅಲ್ಲದೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಸುತ್ತಮುತ್ತಲ ಭಾಗಗಳಲ್ಲಿ ಉದ್ಯೋಗ ಸೃಷ್ಟಿಸಲು ಇದು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಕೆಜಿಎಫ್ ನಗರವು ರಾಜಧಾನಿ ಬೆಂಗಳೂರಿನಿಂದ ಸುಮಾರು 100 ಕಿ.ಮೀ ವ್ಯಾಪ್ತಿಯಲ್ಲಿದ್ದು, ವಿಶ್ವದರ್ಜೆಯ ರಾಷ್ಟ್ರೀಯ ಹೆದ್ದಾರಿಗಳು, ಕೆಂಪೇಗೌಡ  ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣ, ಅತ್ಯುತ್ತಮ ರೈಲ್ವೆ ಸಂಪರ್ಕ ಹೊಂದಿದೆ ಎಂದು ಮುರುಗೇಶ್ ನಿರಾಣಿ ಹೇಳಿದರು.
ಅಲ್ಲದೆ ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಕೂಡ ಇಲ್ಲಿಯೇ ಹಾದು ಹೋಗುವುದರಿಂದ ಕೈಗಾರಿಕಾ ಬೆಳವಣಿಗೆಗೆ ಸಾಕಷ್ಟು ಸಹಕಾರಿಯಾಗಲಿದೆ. ಟೌನ್‍ಶಿಪ್ ನಿರ್ಮಾಣ ಮಾಡಲು ಯೋಗ್ಯವಾಗಿರುವುದರಿಂದ ನಮ್ಮ ಮನವಿಯನ್ನು ಪರಿಗಣಿಸಬೇಕೆಂದು ಅವರು ಕೋರಿದರು. 

ಸೂಕ್ತ ಭರವಸೆ: ಸಚಿವ ಮುರುಗೇಶ್ ನಿರಾಣಿಯವರ ಕೋರಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಸದ್ಯದಲ್ಲಿಯೇ ಸ್ಥಳಕ್ಕೆ ಅಧಿಕಾರಿಗಳನ್ನು ಕಳುಹಿಸಿ ವಸ್ತುಸ್ಥಿತಿ ಅಧ್ಯಯನ ನಡೆಸುವಂತೆ ಸೂಚನೆ ನೀಡಲಾಗುವುದು. ಕೆಜಿಎಫ್‍ನಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪನೆ ಮಾಡಲು ಕೇಂದ್ರದಿಂದ ಎಲ್ಲ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆ ಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News