ದುರ್ಬಲಗೊಂಡ ನೈಋತ್ಯ ಮುಂಗಾರು: ಸಾಧಾರಣ ಮಳೆ ಮುಂದುವರಿಕೆ

Update: 2021-08-11 18:24 GMT

ಬೆಂಗಳೂರು, ಆ.11: ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಒಳನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. 

ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆ.1ರಿಂದ 10ರ ಅವಧಿಯಲ್ಲಿ ಮುಂಗಾರು ಕ್ಷೀಣಗೊಂಡಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಕೊರತೆ ಉಂಟಾಗಿದೆ. ಜೂ.1ರಿಂದ ಆ.10ರ ನಡುವಿನ ಅವಧಿಯಲ್ಲೂ ರಾಜ್ಯದಲ್ಲಿ ಶೇ.3ರಷ್ಟು ಮಳೆ ಕೊರತೆ ಕಂಡು ಬಂದಿದೆ. ಈ ಅವಧಿಯಲ್ಲಿ 553 ಮಿಲಿ ಮೀಟರ್ ವಾಡಿಕೆ ಮಳೆಯಾಗಿದ್ದು, 536 ಮಿಲಿ ಮೀಟರ್‍ನಷ್ಟು ಮಾತ್ರ ಮಳೆ ಬಿದ್ದ ವರದಿಯಾಗಿದೆ. ಆದರೆ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದ ಮಳೆಯಾಗಿದೆ. 

ಹಾವಾಮಾನ ಮುನ್ಸೂಚನೆ ಪ್ರಕಾರ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದೆ ಎಂದು ಬೆಂಗಳೂರು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು. 

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಕಡಿಮೆಯಾಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ಆದರೆ, ಸದ್ಯಕ್ಕೆ ಭಾರೀ ಮಳೆಯಾಗುವ ಯಾವುದೇ ಮುನ್ಸೂಚನೆಗಳಿಲ್ಲ. ಹೀಗಾಗಿ, ಯಾವುದೇ ರೀತಿಯ ಎಚ್ಚರಿಕೆ ನೀಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News