ಕೋವಿಡ್ ಸಂಭಾವ್ಯ ಮೂರನೆ ಅಲೆ ಎದುರಿಸಲು ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗೆ ಕ್ರಮ: ಸಿಎಂ
ಮಂಗಳೂರು, ಆ.12:-ರಾಜ್ಯದಲ್ಲಿ ಸಂಭಾವ್ಯ ಕೋವಿಡ್ ಮೂರನೆ ಅಲೆಯನ್ನು ಎದುರಿಸಲು ಪೂರಕವಾಗುವ ಎಲ್ಲಾ ತುರ್ತು ವ್ಯವಸ್ಥೆ ಗಳನ್ನು ಬಲಪಡಿಸಬೇಕಾಗಿದೆ. ಆರೋಗ್ಯ ಸೇವೆಯ ಮೂಲ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸುವ ಬಗ್ಗೆ ಮತ್ತು ಮಕ್ಕಳ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಲು ರಾಜ್ಯದಲ್ಲಿ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಜಿಲ್ಲಾಸ್ಪತ್ರೆಯ ಮೆಡಿಸಿನ್ ವಿಭಾಗದ ನೂತನ ಐಸಿಯು ಘಟಕವನ್ನು ಸಿಎಂ ಅವರು ಉದ್ಘಾಟಿಸಿದ ಬಳಿಕ ಸುದ್ದಿ ಗಾರರೊಂದಿಗೆ ಮಾತನಾಡುತ್ತಿದ್ದರು.
ಕೋವಿಡ್ ಒಂದು ಮತ್ತು ಎರಡನೆ ಅಲೆಯ ಸಂದರ್ಭದಲ್ಲಿ ಗಡಿಭಾಗದ ಮೂಲಕ ನಮಗೆ ಸೋಂಕು ಹರಡಿರುವ ಅನುಭವದ ಹಿನ್ನೆಲೆಯಲ್ಲಿ ತಜ್ಞರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಈ ಬಾರಿ ಮೂರನೆ ಅಲೆಯ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಹೆಚ್ಚು ಮುಂಜಾಗ್ರತಾ ಕ್ರಮಗಳಿಗೆ ಸೂಚನೆ ನೀಡಲಾಗಿದೆ. ಅದಕ್ಕಾಗಿ ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಿ ಅಲ್ಲಿನ ಕೋವಿಡ್ ನಿಯಂತ್ರಣ ಕ್ರಮಗಳ ಬಗ್ಗೆ ಸೂಚನೆ ನೀಡುವ ಉದ್ದೇಶ ದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡುತ್ತಿರುವುದಾಗಿ ಬಸವರಾಜ ಎಸ್.ಬೊಮ್ಮಾಯಿ ತಿಳಿಸಿದ್ದಾರೆ.
ಮೂರನೆ ಅಲೆಯ ಸಂದರ್ಭದಲ್ಲಿ ಐಸಿಯು ಬೆಡ್ ಕೊರತೆ, ವೆಂಟಿಲೇಟರ್ ಕೊರತೆ ಆಗದಂತೆ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಮ
ರಾಜ್ಯದಲ್ಲಿ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಕಡಿಮೆ ತೂಕದ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಇಡೀ ರಾಜ್ಯದಲ್ಲಿ ಕ್ರಮ ಕೈ ಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರತಿ ಗ್ರಾಮದಲ್ಲೂ ಮಕ್ಕಳ ಬಗ್ಗೆ ನಿಗಾವಹಿಸಲು ಮತ್ತು ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗುವುದು.
ವೆನ್ ಲಾಕ್ ಆಸ್ಪತ್ರೆಯ ಐಸಿಯು ವಿಭಾಗದಲ್ಲೂ ಶೇ.50ನ್ನು ಮಕ್ಕಳ ಚಿಕಿತ್ಸೆಗೆ ಮೀಸಲಿಡಲು ತೀರ್ಮಾನಿಸಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ.