ಯೂರಿಯಾ ಉತ್ಪಾದನೆಯಲ್ಲಿ ಭಾರತ ಶೀಘ್ರವೇ ಸ್ವಾವಲಂಬಿ ಆಗಲಿದೆ: ಕೇಂದ್ರ ಸಚಿವ ಭಗವಂತ್ ಖೂಬಾ

Update: 2021-08-13 13:09 GMT

ಬೆಂಗಳೂರು, ಆ.13: ನನ್ನ ಎರಡೂ ಖಾತೆಗಳ ವಿಚಾರದಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದೇನೆ. ವಿದ್ಯುತ್ ಕ್ಷೇತ್ರದಲ್ಲಿ ದೇಶವು ಸ್ವಾವಲಂಬಿ ಆಗಿದೆ. ಮುಂದಿನ ಕೆಲವೇ ತಿಂಗಳುಗಳಲ್ಲಿ ನಾಲ್ಕು ಹೊಸ ರಸಗೊಬ್ಬರ ಕಾರ್ಖಾನೆಗಳು ಕಾರ್ಯಾರಂಭ ಮಾಡಲಿದ್ದು, ಯೂರಿಯಾ ಉತ್ಪಾದನೆಯಲ್ಲಿ ದೇಶವು ಶೀಘ್ರವೇ ಸ್ವಾವಲಂಬಿ ಆಗಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ತಿಳಿಸಿದರು.

ಶುಕ್ರವಾರ ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಫ್ಕೋ ಕಂಪೆನಿಯು ಕರ್ನಾಟಕದಲ್ಲಿ ನ್ಯಾನೊ ಯೂರಿಯಾ ಉತ್ಪಾದನಾ ಘಟಕ ಆರಂಭಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ರಾಜ್ಯ ಸರಕಾರವು ಮೂಲಸೌಕರ್ಯ ನೀಡಿದ ಬಳಿಕ ಅದು ರಾಜ್ಯದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.

ಜುಲೈ 7ರಂದು ಕೇಂದ್ರ ಸಚಿವ ಸಂಪುಟದಲ್ಲಿ ಸಚಿವನಾಗಲು ಅವಕಾಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷಕ್ಕೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದ ಅವರು, ಕಳೆದ 22 ವರ್ಷಗಳಿಂದ ಪಕ್ಷದಲ್ಲಿ ದುಡಿದಿದ್ದೇನೆ. ಅದಕ್ಕಿಂತ ಮೊದಲು ಸಂಘ ಪರಿವಾರದಲ್ಲಿ ಕೆಲಸ ಮಾಡಿದ್ದೇನೆ. ಪಕ್ಷದಲ್ಲೂ ವಿವಿಧ ಜವಾಬ್ದಾರಿ ನಿರ್ವಹಿಸಿದ್ದೇನೆ. ಈಗ ಹೊಸ ಜವಾಬ್ದಾರಿ ಸಿಕ್ಕಿದ್ದು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದರು.

ಕೇಂದ್ರ ಸರಕಾರವು ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 7 ವರ್ಷಗಳ ಅಧಿಕಾರಾವಧಿಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಮಾಡಿದೆ. ಭಾರತದ ಹೆಮ್ಮೆ, ಗರಿಮೆ ವಿಶ್ವಮಾನ್ಯವಾಗಿ ಹೊರಹೊಮ್ಮುತ್ತಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನೇತೃತ್ವವನ್ನು ಪ್ರಧಾನಿ ನರೇಂದ್ರ ಮೋದಿ ವಹಿಸುತ್ತಿದ್ದಾರೆ. ಇದು ಅತ್ಯಂತ ಹೆಮ್ಮೆಯ ವಿಚಾರ. ಹಿಂದುಳಿದ ಜಾತಿಗಳನ್ನು ಗುರುತಿಸುವ ರಾಜ್ಯಗಳ ಅಧಿಕಾರವನ್ನು ಮರು ಸ್ಥಾಪಿಸುವ ಮಸೂದೆಗೆ ರಾಜ್ಯಸಭೆಯು ಒಪ್ಪಿಗೆ ನೀಡಿದ್ದು, ಇದೊಂದು ಮಹತ್ವದ ಕ್ರಮ ಎಂದು ಅವರು ಶ್ಲಾಘಿಸಿದರು.

ರಸ್ತೆ, ರೈಲ್ವೆ, ವಿಮಾನನಿಲ್ದಾಣ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಲ್ಲಿ ಅಭೂತಪೂರ್ವ ಸಾಧನೆಯನ್ನು ನರೇಂದ್ರ ಮೋದಿ ಸರಕಾರ ಮಾಡಿದೆ. ಅವರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಿದ್ದರಿಂದ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ. ಪಕ್ಷ ಮತ್ತು ನರೇಂದ್ರ ಮೋದಿ ಅವರ ಕೀರ್ತಿ ಹೆಚ್ಚಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸುವುದಾಗಿ ಭಗವಂತ್ ಖೂಬಾ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ಎಸ್.ಮುನಿಸ್ವಾಮಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಸೇರಿದಂತೆ ಇನ್ನಿತರ ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News