ಮಾಣಿಕ್ ಷಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

Update: 2021-08-13 14:09 GMT

ಬೆಂಗಳೂರು,ಆ.13: ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತ, ಜಿಲ್ಲಾಧಿಕಾರಿ ಮಂಜುನಾಥ್, ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಮುಂತಾದವರು ಭದ್ರತೆಯ ಸಿದ್ದತೆ ಬಗ್ಗೆ ಪರಿಶೀಲನೆ ನಡೆಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತ ಅವರು, ಕೊರೋನ ಹಿನ್ನೆಲೆಯಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ಯಾವುದೇ ಸಾಂಸ್ಕøತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ಹೇಳಿದರು. ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನಡೆಸಲಿದ್ದಾರೆ. ನಂತರ ತೆರೆದ ಜೀಪಿನಲ್ಲಿ ಪರೇಡ್ ವೀಕ್ಷಣೆ ಮತ್ತು ಗೌರವರಕ್ಷೆ ಸ್ವೀಕರಿಸಿ ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.

ಗೌರವರಕ್ಷೆ ಸ್ವೀಕರಿಸುವ ಸಲುವಾಗಿ ಆ.11ರಿಂದ ತಾಲೀಮು ನಡೆಸಲಾಗಿದೆ. ಗೌರವರಕ್ಷೆ ಸ್ವೀಕಾರ ಕಾರ್ಯಕ್ರಮದಲ್ಲಿ ಕೆಎಸ್‍ಆರ್‍ಪಿ, ಸಿಆರ್‍ಪಿಎಫ್, ಬಿಎಸ್‍ಎಫ್, ಸಿಎಆರ್, ಕೆಎಸ್‍ಐಎಸ್‍ಎಫ್, ಟ್ರಾಫಿಕ್ ಪೋಲೀಸ್, ಮಹಿಳಾ ಪೋಲೀಸ್, ಹೋಮ್‍ಗಾರ್ಡ್, ವಾರ್ಡನ್, ಅಗ್ನಿಶಾಮಕ ದಳ ಸಿಬ್ಬಂದಿ, ಬ್ಯಾಂಡ್‍ನ ಒಟ್ಟು 20 ತುಕಡಿಗಳಲ್ಲಿ ಸುಮಾರು 471 ಮಂದಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮೈದಾನಕ್ಕೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ಮತ್ತು ಸುರಕ್ಷತೆಗೆ 60 ಸಿಸಿ ಕ್ಯಾಮೆರಾ ಹಾಗೂ ಎರಡು ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆ ಮಾಡಲಾಗಿರುತ್ತದೆ. ಗಣ್ಯರು, ಅತಿಗಣ್ಯರು ಸೇರಿದಂತೆ ಇತರೆ ಆಹ್ವಾನಿತರಿಗೆ ಒಂದು ಸಾವಿರ ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಬಾರಿ ವಿಶೇಷವಾಗಿ ವೈದ್ಯರು, ಆರೋಗ್ಯ ಮತ್ತು ಸ್ವಚ್ಛತಾ ಕಾರ್ಯಕರ್ತರು ಹಾಗೂ ವಿವಿಧ ಇಲಾಖೆಯ ಕೋವಿಡ್ ವಾರಿಯರ್‍ಗಳು ಸೇರಿ ಒಟ್ಟು ನೂರು ಸಿಬ್ಬಂದಿ ಮತ್ತು ಕೋವಿಡ್‍ನಿಂದ ಗುಣಮುಖರಾಗಿರುವ ಎಲ್ಲ ವಯೋಮಾನದವರು ಒಳಗೊಂಡಂತೆ 25 ಮಂದಿಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಪ್ರವೇಶ ನಿಬರ್ಂಧಿಸಲಾಗಿದೆ ಎಂದು ಗೌರವ್ ಗುಪ್ತ ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಮಾತನಾಡಿ, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮಿಲಿಟರಿ ಹಾಗೂ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದೋಬಸ್ತ್ ಕರ್ತವ್ಯಕ್ಕೆ ಬೆಂಗಳೂರು ನಗರದ ಸಿವಿಲ್ ಪೊಲೀಸ್ ಅಧಿಕಾರಿಗಳೊಂದಿಗೆ ಸಂಚಾರ, ಕೆಎಸ್‍ಆರ್‍ಪಿ, ಸಿಎಆರ್, ಟ್ರಾಫಿಕ್ ವಾರ್ಡನ್‍ಗಳು, ಅರೆಸೇನಾ ಪಡೆ ಸೇರಿ ಎಲ್ಲ ಘಟಕಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ ಎಂದು ಹೇಳಿದರು.

ಇದಲ್ಲದೆ ಅಗ್ನಿಶಾಮಕ, ಆ್ಯಂಬುಲೆನ್ಸ್ ವಾಹನಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ(ಕ್ಯೂಆರ್‍ಟಿ) ಡಿ-ಸ್ಪಾಟ್, ಆರ್‍ಐವಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಮತ್ತು ಗರುಡಾ ಪಡೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಕಾಯ್ದಿರಿಸಲಾಗಿದೆ.

ಪಾಸ್ ಇರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ನೀರಿನ ಬಾಟಲ್, ಊಟದ ಡಬ್ಬಿ, ಬೆಂಕಿಕಡ್ಡಿ, ಹರಿತವಾದ ವಸ್ತು, ಚಾಕುಚೂರಿ, ಪಟಾಕಿ, ವಿಡಿಯೋ ಮತ್ತು ಸ್ಟಿಲ್ ಕ್ಯಾಮೆರಾ, ಶಸ್ತ್ರಾಸ್ತ್ರ ಕಪ್ಪುಕರವಸ್ತ್ರ, ಮದ್ಯದ ಬಾಟಲು, ಬಾವುಟಗಳನ್ನು ತರುವಂತಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News