×
Ad

ಮಳೆಯಿಂದ ಹಾನಿಯಾದ ರಸ್ತೆ ದುರಸ್ತಿಗೆ ಆದ್ಯತೆ ನೀಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-08-17 21:25 IST

ಬೆಂಗಳೂರು, ಆ.17: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ.  ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ದುರಸ್ತಿಗೆ ಬಳಕೆ ಮಾಡುವಂತೆ ಸೂಚಿಸಿದರು.

ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಸಾವಿರ ಕೋಟಿ ರೂ.ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ.ಕೆ.ಎಸ್. ಕೃಷ್ಣರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News