ಅಫ್ಘಾನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ವ್ಯವಸ್ಥೆ: ಗೃಹ ಸಚಿವ ಆರಗ ಜ್ಞಾನೇಂದ್ರ

Update: 2021-08-20 12:06 GMT

ಮಂಗಳೂರು, ಆ.20: ತಾಲಿಬಾನ್ ವಶದಲ್ಲಿರುವ ಅಫ್ಘಾನಿಸ್ತಾನದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ವ್ಯವಸ್ಥೆಯಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರಲ್ಲಿ ಮಾತನಾಡಿದ ಅವರು, ರಾಜ್ಯದಿಂದ ನೋಡಲ್ ಆಫೀಸರ್ ನೇಮಕ ಮಾಡಿದ್ದೇವೆ. ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಮೇಶ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅವರು ಈ ಹಿಂದೆ ವಿದೇಶದಲ್ಲಿ ಅತಂತ್ರರಾಗಿದ್ದ ಕನ್ನಡಿಗರನ್ನು ಅವರು ಕರೆ ತಂದಿದ್ದಾರೆ. ಸಂಕಷ್ಟದಲ್ಲಿರುವವರು ಅವರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ ಎಂದರು.

ಕೇಂದ್ರ ಸಚಿವ ಭಗವಂತ ಖೂಬಾ ಅವರ ಜನಾಶೀರ್ವಾದ ಯಾತ್ರೆಯನ್ನು ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿದ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಅನೇಕ ಕಡೆಗಳಲ್ಲಿ ಈ ರೀತಿ ಆಗುತ್ತಿದೆ. ಇದು ಸರಿಯಾ ಎಂದರೆ, ಖಂಡಿತ ತಪ್ಪು. ಮಲೆನಾಡು ಮತ್ತು ಕೊಡಗಿನಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಸಂಸ್ಕೃತಿ ಇದೆ. ಖುಷಿ ಹಾಗೂ ದುಃಖದ ಸಂದರ್ಭದಲ್ಲಿ ಹೀಗೆ ಮಾಡುತ್ತಾರೆ. ಸಾರ್ವಜನಿಕವಾಗಿ ಈ ರೀತಿ ಮಾಡಿರುವುದು ತಪ್ಪು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಮಂಗಳೂರಿನಲ್ಲಿ ಕೇಂದ್ರ ತನಿಖಾ ಸಂಸ್ಥೆ(ಎನ್‌ಐಎ) ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದವರು ಹೇಳಿದರು.

ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜ, ಉಮಾನಾಥ್ ಕೋಟ್ಯಾನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News