ಆತಂಕವಿಲ್ಲದೆ ಮಕ್ಕಳು ಶಾಲೆಗೆ ಆಗಮಿಸಬಹುದು: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆ. 21: `ರಾಜ್ಯದಲ್ಲಿ ಸೋಮವಾರದಿಂದ 9ನೆ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಮಕ್ಕಳ ಸುರಕ್ಷಿತ ಕಲಿಕೆಗೆ ಸರಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಯಾವುದೇ ಆತಂಕ ಇಲ್ಲದೆ ಮಕ್ಕಳು ಶಾಲೆಗೆ ಬರಬಹುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಕರೆ ನೀಡಿದ್ದಾರೆ.
ಶನಿವಾರ ಇಲ್ಲಿನ ಆರ್.ಟಿ.ನಗರದಲ್ಲಿನ ತನ್ನ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಶಾಲೆ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆ.23ರಿಂದ ಭೌತಿಕ ತರಗತಿಗಳು ಆರಂಭವಾಗುತ್ತಿದೆ. ಆರಂಭದ ದಿನ ಬೆಂಗಳೂರಿನ ಕೆಲ ಶಾಲೆಗಳಿಗೆ ನಾನು ಖುದ್ದು ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸುತ್ತೇನೆ' ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
`ಶಾಲೆಗಳ ಆರಂಭಕ್ಕೆ ಎಲ್ಲ ರೀತಿಯ ಸಿದ್ಧತೆ ಆಗಿದೆ. ಶಿಕ್ಷಕರಿಗೆ ವ್ಯಾಕ್ಸಿನ್ ಹಾಕಿಸಿದ್ದು, ಎಲ್ಲ ಶಾಲೆಗಳನ್ನು ಸ್ಯಾನಿಟೈಝ್ ಮಾಡಲಾಗಿದೆ. ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಯ್ದುಕೊಂಡೇ ತರಗತಿಗಳನ್ನು ನಡೆಸಲಾಗುತ್ತದೆ, ದಿನ ಬಿಟ್ಟು ದಿನದಂತೆ ಬ್ಯಾಚ್‍ಗಳನ್ನು ಮಾಡಿ ಶಾಲೆ ನಡೆಸಲಾಗುತ್ತದೆ. ಪೋಷಕರ ಸಮ್ಮತಿ ಪಡೆದೇ ಮಕ್ಕಳು ಶಾಲೆಗೆ ಬರಬೇಕು' ಎಂದು ಬೊಮ್ಮಾಯಿ ಸಲಹೆ ನೀಡಿದರು.
`ಕೋವಿಡ್ ಸೋಂಕಿನಿಂದ ರಕ್ಷಿಸಿಕೊಳ್ಳಲು ಪೋಷಕರು ವ್ಯಾಕ್ಸಿನ್ ಹಾಕಿಸಿಕೊಳ್ಳಬೇಕು. ಮಕ್ಕಳ ಆರೋಗ್ಯದ ಬಗ್ಗೆ ಪೋಷಕರು ಗಮನ ಹರಿಸಬೇಕು. ಶಾಲೆಗೆ ಹೋಗಿ ಬಂದ ತಕ್ಷಣ ಮಕ್ಕಳ ಆರೋಗ್ಯದ ಮೇಲೆ ನಿಗಾ ಇರಿಸಬೇಕು. ನಿಧಾನವಾಗಿ ಮಕ್ಕಳು ಶಾಲೆಗೆ ಬರಬೇಕು ಎನ್ನುವುದೇ ನಮ್ಮ ಉದ್ದೇಶ ಎಂದ ಅವರು, ಒಂದೂವರೆ ವರ್ಷದಿಂದ ವಿದ್ಯಾರ್ಥಿಗಳು ಶಾಲೆಗಳಿಗೆ ಹೋಗಿಲ್ಲ. ಹೀಗಾಗಿ ಹಂತಹಂತವಾಗಿ ಹಾಜರಿ ಹೆಚ್ಚಾಗಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ ಎಂದರು.
ಯಾವುದೇ ಆತಂಕ ಇಲ್ಲದೆ ವಿದ್ಯಾರ್ಥಿಗಳು ಶಾಲೆಗೆ ಬರಬಹುದು. ಕೊರೋನ ಪಾಸಿಟಿವಿಟಿ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ತೆರೆಯಲು ಅನುಮತಿ ನೀಡಲಾಗಿದೆ. ಕೋವಿಡ್ ದೃಢ ಪ್ರಮಾಣ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಆರಂಭ ಮಾಡುವುದಿಲ್ಲ. ಶಾಲೆ ಆರಂಭಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದರು.
ಆಲಮಟ್ಟಿಗೆ ಭೇಟಿ ನೀಡುತ್ತಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡುತ್ತೇನೆ. ಬಾಗಲಕೋಟೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಕೊರೋನ ನಿರ್ವಹಣೆ ಮತ್ತು ನೆರೆಹಾನಿ ಕುರಿತು ಸಭೆ ನಡೆಸುತ್ತೇನೆ. ನಂತರ ಬೆಳಗಾವಿಗೆ ತೆರಳಿ ಸುವರ್ಣಸೌಧದಲ್ಲಿ ಕೋವಿಡ್ ಮತ್ತು ನೆರೆ ಬಗ್ಗೆ ಚರ್ಚೆ ನಡೆಸಲಿದ್ದೇನೆ ಎಂದು ಅವರು ಹೇಳಿದರು.
ಬಳಿಕ ಬೆಳಗಾವಿಗೆ ನೀಡಲಿರುವ ಸಿಎಂ ಸಭೆ ನಡೆಸಲಿದ್ದು, ಬೆಳಗಾವಿ ನೆರೆಹಾನಿ ಪರಿಹಾರಗಳು ಕ್ರಮದ ಬಗ್ಗೆ ಜಿಲ್ಲಾ ಉಸ್ತುವಾರಿ, ಜಿಲ್ಲಾಧಿಕಾರಿಗಳು ಸೇರಿದಂತೆ ಹಿರಿಯ ಅಧಿಕಾರಿಗಳ ಚರ್ಚೆ ನಡೆಸಲಿದ್ದಾರೆ. ರಾತ್ರಿ ಹುಬ್ಬಳ್ಳಿಯಲ್ಲೇ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ ಅವರು ನಾಳೆ ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.