ಮಹದಾಯಿ ಯೋಜನೆ ಜಾರಿಗೆ ನಾವೇ ಅಡಿಗಲ್ಲು ಹಾಕುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ
Update: 2021-08-25 20:08 IST
ಬೆಳಗಾವಿ, ಆ.25: ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ನ್ಯಾಯಮಂಡಳಿ ಐತೀರ್ಪು ನೀಡಿದ್ದು, ರಾಜ್ಯ ಸರಕಾರ ಈ ಕೂಡಲೇ ಯೋಜನೆ ಜಾರಿಗೆ ಮುಂದಾಗಬೇಕು. ಇಲ್ಲದಿದ್ದರೆ ನಾವೇ ಖುದ್ದು ಅಡಿಗಲ್ಲು ಹಾಕಿ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ಬುಧವಾರ ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಯನ್ನು ಅಂತರ ರಾಜ್ಯ ಸಮಸ್ಯೆಯಾಗಿ ಮಾರ್ಪಾಡು ಮಾಡಿದ್ದಾರೆ. ಗೋವಾದವರು ಪ್ರಶ್ನೆ ಮಾಡಲು ಶುರು ಮಾಡಿದ್ದಾರೆ. ಸರಕಾರವು ಅನಗತ್ಯವಾಗಿ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದರು.
ಕೃಷ್ಣಾ ನದಿ ನೀರು ಬಳಕೆ ಮಾಡಿಕೊಳ್ಳುವುದಕ್ಕೆ ಈವರೆಗೂ ನಮ್ಮಿಂದ ಸಾಧ್ಯವಾಗಿಲ್ಲ. ಇದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಬೇಕು. ಮೇಕೆದಾಟು ಯೋಜನೆಗೆ ಅಡಿಗಲ್ಲು ಹಾಕಿ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ತಿಳಿಸಿದರು.