ಮೂರು ಕೃಷಿ ಕಾನೂನುಗಳ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ತಮಿಳುನಾಡು ಸಿಎಂ ಸ್ಟಾಲಿನ್

Update: 2021-08-28 07:44 GMT

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಶನಿವಾರ ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸುವ ನಿರ್ಣಯವನ್ನು ಮಂಡಿಸಿದರು. ನಿರ್ಣಯವನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಇದರೊಂದಿಗೆ, ಪಂಜಾಬ್, ರಾಜಸ್ಥಾನ, ಛತ್ತೀಸ್‌ಗಢ, ದಿಲ್ಲಿ, ಕೇರಳ ಹಾಗೂ  ಪಶ್ಚಿಮ ಬಂಗಾಳದ ನಂತರ ತಮಿಳುನಾಡು ಕೃಷಿ ಕಾನೂನುಗಳನ್ನು ವಿರೋಧಿಸಿದ  ಏಳನೇ ರಾಜ್ಯವಾಗಿದೆ.

ಕೇಂದ್ರ ಸರಕಾರವು ಮೂರು ಕೃಷಿ ಕಾನೂನುಗಳನ್ನು ಜಾರಿಗೊಳಿಸಿದಾಗಿನಿಂದ ಸ್ಟಾಲಿನ್ ಅವರ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಕೇಂದ್ರವು ಕಾನೂನುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಾ ಬಂದಿದೆ. ಇದು "ರೈತರ ಹಿತಾಸಕ್ತಿಗೆ ವಿರುದ್ಧವಾಗಿದೆ" ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ದೇಶದಾದ್ಯಂತ ರೈತರ ಭಾವನೆಗಳನ್ನು ಪ್ರತಿಬಿಂಬಿಸುವ ಈ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಣಯವನ್ನು ಅಂಗೀಕರಿಸಲು ಸರಕಾರ ಸ್ಪಷ್ಟ ನಿರ್ಧಾರ ತೆಗೆದುಕೊಂಡಿದೆ. ಆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಟಾಲಿನ್ ಜೂನ್ ನಲ್ಲಿ ಹೇಳಿದ್ದರು.

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಧಾರವನ್ನು ತನ್ನ ಸರಕಾರವು ವಿಧಾನಸಭೆಯಲ್ಲಿ ತರುತ್ತದೆ ಎಂದು ಸ್ಟಾಲಿನ್ ಮೇ ತಿಂಗಳಲ್ಲಿ ಹೇಳಿದ್ದರು. ಡಿಎಂಕೆಯ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯೊಂದನ್ನು ಅವರು ನೆನಪಿಸಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News