ಉತ್ಸವ ಕಾಲದಲ್ಲಿ ಜನ ಸೇರಲು ಅವಕಾಶ ನೀಡದಿರಿ: ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ

Update: 2021-08-28 17:36 GMT

ಹೊಸದಿಲ್ಲಿ, ಅ. 28: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಮುಂಬರುವ ಉತ್ಸವ ಕಾಲದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಲು ಅವಕಾಶ ನೀಡದಂತೆ ಹಾಗೂ ಒಂದು ವೇಳೆ ಅಗತ್ಯವಾದರೆ, ಸ್ಥಳೀಯ ಮಟ್ಟದಲ್ಲಿ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ಶನಿವಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿದೆ. 

ಕೋವಿಡ್ ಮಾರ್ಗಸೂಚಿಯನ್ನು ಸೆಪ್ಟಂಬರ್ 30ರ ವರೆಗೆ ಇನ್ನೂ ಒಂದು ತಿಂಗಳ ಕಾಲ ವಿಸ್ತರಿಸಿರುವುದಾಗಿ ತಿಳಿಸಿದ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಕೆಲವು ರಾಜ್ಯಗಳಲ್ಲಿ ಸ್ಥಳೀಯವಾಗಿ ಹರಡುತ್ತಿರುವುದನ್ನು ಹೊರತುಪಡಿಸಿದರೆ, ದೇಶಾದ್ಯಂತದ ಕೋರನ ವೈರಸ್ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದೆ ಎಂದಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಹಾಗೂ ಹೆಚ್ಚು ಪಾಸಿಟಿವಿಟಿ ದರಗಳು ಮುಂದುವರಿದಿರುವುದು ಕಳವಳಕಾರಿ ವಿಚಾರ ಎಂದು ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ ಅವರು ಹೇಳಿದ್ದಾರೆ. 

ರಾಜ್ಯ ಸರಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಜಿಲ್ಲೆಗಳಲ್ಲಿ ಅತ್ಯಧಿಕ ಪಾಸಿಟಿವ್ ದರದ ಬಗ್ಗೆ ಎಚ್ಚರಿಕೆ ವಹಿಸಬೇಕು, ಕೊರೋನ ಪ್ರಕರಣಗಳ ಸಂಖ್ಯೆ ಏರಿಕೆಯಾಗುವುದು ಹಾಗೂ ಹರಡುವುದನ್ನು ಪರಿಣಾಮಕಾರಿಯಾಗಿ ತಡೆಯಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಹೇಳಿದರು. 

ಸಂಭಾವ್ಯ ಉಲ್ಭಣಗಳ ಎಚ್ಚರಿಕೆಯ ಚಿಹ್ನೆಗಳನ್ನು ಮುಂಚಿತವಾಗಿ ಗುರುತಿಸಬೇಕು ಹಾಗೂ ರೋಗ ಹರಡುವುದನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇದಕ್ಕೆ ಸ್ಥಳೀಯ ಮಟ್ಟದ ಕ್ರಮಗಳ ಅಗತ್ಯವಿದೆ ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಎಪ್ರಿಲ್ 25 ಹಾಗೂ ಜೂನ್ 28ರಂದು ನೀಡಿದ ಸಲಹೆಯಲ್ಲಿ ತಿಳಿಸಿದೆ ಎಂದು ಅವರು ಹೇಳಿದರು. ಜನನಿಬಿಡ ಪ್ರದೇಶಗಳಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಬೇಕು ಎಂದು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅವರು ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News