ಜನರ ಸಮಸ್ಯೆಗಳಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ- ಸಚಿವ ಸುನಿಲ್ ಕುಮಾರ್

Update: 2021-08-30 16:27 GMT

ಕಾರ್ಕಳ: ನಾನು ಸಚಿವನಾಗಿ ಯಶಸ್ಸನ್ನು ಕಾಣಬೇಕಾದರೆ ಕಾರ್ಕಳದ ಜನತೆ ನನಗೆ ಸಂಪೂರ್ಣವಾಗಿ ಸಹಕಾರ ನೀಡಬೇಕಾಗಿದೆ. ಕಾರ್ಕಳ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮಹತ್ತರ ಜವಾಬ್ದಾರಿ ನನ್ನ ಮೇಲಿದ್ದು  ಸಚಿವನಾಗಿ ಇಡೀ ರಾಜ್ಯದ ಅಭಿವೃದ್ದಿ ಕೆಲಸಗಳ ಜೊತೆ ಕ್ಷೇತ್ರದ ಪ್ರತೀ ಪಂಚಾಯತ್‍ಗಳ ಅಭಿವೃದ್ದಿ ಕಾರ್ಯಗಳು ನಡೆಯಬೇಕಾಗಿದ್ದು,  ನನ್ನ ಶಕ್ತಿ ಮೀರಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಬೆಳ್ಮಣ್ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಸಚಿವರ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಸಂದರ್ಭ ಬೆಳ್ಮಣ್ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಗ್ರಾಮೀಣ ಭಾಗದ ರಸ್ತೆಗಳ ಸಹಿತ ವಿವಿಧ ಅಭಿವೃದ್ದಿ ಕಾರ್ಯಗಳ ಬಗ್ಗೆ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಬೆಳ್ಮಣ್ ಗ್ರಾಮ ಪಂಚಾಯತ್ ಅಧ್ಯಕ್ಷ ಜನಾರ್ಧನ ತಂತ್ರಿ ಅಧ್ಯಕ್ಷತೆ ವಹಿಸಿದ್ದು,  ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಎಪಿಎಂಸಿ ಅಧ್ಯಕ್ಷ  ರತ್ನಾಕರ ಅಮೀನ್,  ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ರೇಶ್ಮಾ ಉದಯ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಆಶ ದೇವೇಂದ್ರ ಶೆಟ್ಟಿ, ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್, ತಾಲೂಕು ಕಾರ್ಯನಿರ್ವಹಣಾಕಾರಿ ಗುರುದತ್ತ್ ,  ತಾಲೂಕು ಆರೋಗ್ಯಾಧಿಕಾರಿ ಕೃಷ್ಣಾನಂದ, ನ್ಯಾಯವಾದಿ ಸರ್ವಜ್ಞ ತಂತ್ರಿ, ಗ್ರಾ. ಪಂ. ಉಪಾಧ್ಯಕ್ಷೆ ಸಹನಾ ಕುಂದರ್, ಪಂ.ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಮತ್ತಿತರಿದ್ದರು.

ಇದೇ ಸಂದರ್ಭ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಚಿವರನ್ನು ಗೌರವಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News