ದೇಶ ವಿರೋಧಿ ಚಟುವಟಿಕೆ ಮೇಲೆ ನಿಗಾ : ಸಿಎಂ ಬಸವರಾಜ ಬೊಮ್ಮಾಯಿ‌

Update: 2021-09-01 07:33 GMT

ಹುಬ್ಬಳ್ಳಿ: ದೇಶವಿರೋಧಿ ಚಟುವಟಿಕೆ ಕುರಿತು ರಾಜ್ಯ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿದೆ. ಎನ್ ಐ ಎ ಜೊತೆ ನಿಕಟ ಸಂಪರ್ಕದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಆಧಾರದಲ್ಲಿಯೇ ಇಂತಹ ಚಟುವಟಿಕೆಗಳಲ್ಲಿ ತೊಡಗಿರುವ ಹಲವರನ್ನು ಎನ್ ಐ ಎ ಬಂಧಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌  ತಿಳಿಸಿದರು.

ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. 

ನಮ್ಮ ಪೊಲೀಸರು ನಿರಂತರವಾಗಿ ಕರಾವಳಿ ಮತ್ತು ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇರಿಸಿದ್ದಾರೆ. ದೇಶ ವಿರೋಧಿ ಚಟುವಟಿಕೆಗಳನ್ನು ನಾವು ಸಹಿಸುವುದಿಲ್ಲ. ಅದರ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ಇರುತ್ತದೆ. ಎನ್ ಐ ಎ ಜತೆ ನಿರಂತರ ಸಂಪರ್ಕ ಇಟ್ಟುಕೊಂಡು ದೇಶ ವಿರೋಧಿ ಚಟುವಟಿಕೆಗಳನ್ನು ಹತ್ತಿಕ್ಕಲಾಗುತ್ತಿದೆ  ಎಂದು ಅವರು ತಿಳಿಸಿದರು.

ಗಣೇಶೋತ್ಸವ ಆಚರಣೆ: ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಎಲ್ಲ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ಮತ್ತಿತರ ಮಾಹಿತಿ ಪಡೆದು ಕೊಂಡು, ಸೆ. 5 ರಂದು ತಜ್ಞರೊಂದಿಗೆ ಸಮಾಲೋಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ‌  ತಿಳಿಸಿದರು.

ಗಣೇಶೋತ್ಸವ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಆಚರಿಸಲಾಗುತ್ತಿದೆ. ಹೀಗಾಗಿ ಕಳೆದ ಬಾರಿ ಹೇಗೆ ನಿರ್ವಹಣೆ ಮಾಡಲಾಗಿದೆ. ಈ ವರ್ಷದ ಪರಿಸ್ಥಿತಿಯಲ್ಲಿ ಹೇಗೆ ಆಚರಿಸಬೇಕು ಎಂಬ ಬಗ್ಗೆ ಜಿಲ್ಲೆಗಳಿಂದ  ಸಂಪೂರ್ಣ ವರದಿ ಪಡೆದು, ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕೋವಿಡ್ 19 ಪರಿಸ್ಥಿತಿ ಸುಧಾರಿಸಿರುವ ಗಡಿ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯ ಕರ್ಫ್ಯೂ ಹಿಂಪಡೆಯಲಾಗಿದೆ. ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು. ಪರಿಸ್ಥಿತಿ ಸುಧಾರಿಸಿದಂತೆಲ್ಲ, ನಿರ್ಬಂಧಗಳನ್ನು ಸಡಿಲಿಸಲಾಗುವುದು ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News