ಅಡುಗೆ ಅನಿಲ ಸಿಲಿಂಡರ್, ತೈಲ ಬೆಲೆ ಏರಿಕೆ ಕುರಿತು ಕೇಂದ್ರ ಸಚಿವರ ಜೊತೆ ಚರ್ಚೆ: ಮುಖ್ಯಮಂತ್ರಿ ಬೊಮ್ಮಾಯಿ

Update: 2021-09-02 17:39 GMT

ಹುಬ್ಬಳ್ಳಿ, ಸೆ.2: ಅಂತರ್‍ರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಅಡುಗೆ ಅನಿಲ ಸಿಲಿಂಡರ್, ತೈಲ ಬೆಲೆಗಳು ಹೆಚ್ಚಾಗಿವೆ. ಸೆ.5ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಆಗಮಿಸುತ್ತಿದ್ದು ಅವರ ಜೊತೆ ಈ ಸಂಬಂಧ ಚರ್ಚೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗುರುವಾರ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಇನ್ನೂ ಯಾವುದೇ ಚರ್ಚೆ ಮಾಡಿಲ್ಲ. ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆಯೋ ಇಲ್ಲವೋ ಎಂಬುದರ ಬಗ್ಗೆಯೂ ಈ ವೇಳೆ ಚರ್ಚಿಸಲು ಇಷ್ಟಪಡಲ್ಲ ಎಂದರು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ. ತಜ್ಞರ ಜೊತೆ ಚರ್ಚಿಸಿ ವಾರಾಂತ್ಯದ ಕಫ್ರ್ಯೂ ಕುರಿತು ನಿರ್ಧಾರ ಮಾಡುತ್ತೇವೆ. ಅಲ್ಲದೆ, ಜಿಲ್ಲೆಗಳಿಂದ ಅಂತಿಮ ವರದಿಯನ್ನು ತರಿಸಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೋ, ಇಲ್ಲವೋ ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಕೇರಳ ರಾಜ್ಯದ ಗಡಿಯಿಂದ ನಮ್ಮ ರಾಜ್ಯಕ್ಕೆ ನಕಲಿ ಆರ್‍ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಪಡೆದು ಜನರು ಬರುತ್ತಿರುವ ಬಗ್ಗೆ ಆರೋಪಗಳು ಕೇಳಿ ಬಂದಿವೆ. ಆದುದರಿಂದ, ಕೋವಿಡ್ ವರದಿಗಳನ್ನು ಸಮರ್ಪಕವಾಗಿ ಪರಿಶೀಲನೆ ಮಾಡಿದ ಬಳಿಕವಷ್ಟೇ ರಾಜ್ಯದ ಗಡಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ನಕಲಿ ಆರ್‍ಟಿಪಿಸಿಆರ್ ನೆಗೆಟಿವ್ ವರದಿಗಳನ್ನು ತರುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News