ಭಟ್ಕಳ: ಅತ್ಯಾಚಾರ, ಕೊಲೆ ಪ್ರಕರಣ ವಿರುದ್ಧ ಪ್ರತಿಭಟನೆ

Update: 2021-09-09 17:35 GMT

ಭಟ್ಕಳ: ಅಧಿಕಾರಿ ರಬಿಯಾ ಸೈಫಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ನಂತರ ಕ್ರೂರವಾಗಿ ಹತ್ಯೆ ಮಾಡಲಾಗಿದ್ದು ಈ ಪ್ರಕರಣದ ತನಿಖೆಯನ್ನು ಸ್ವತಂತ್ರ್ಯ ಸಂಸ್ಥೆಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿ ಗುರುವಾರ ಇಲ್ಲಿನ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆ ಸಹಾಯಕ ಆಯುಕ್ತರ ಮೂಲಕ ದೇಶದ ಪ್ರಧಾನಿ ಅವರಿಗೆ ಮನವಿ ಪತ್ರವನ್ನು ಅರ್ಪಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ತಂಝೀಮ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ, ಬೇಟಿ ಬಚಾವೋ ಬೇಟಿ ಪಡಾವೋ ಎಂಬುದು ಕೇವಲ ಘೋಷಣೆಯಾಗಿರುವ ದೇಶದ ಇಂದಿನ ಪ್ರಸಕ್ತ ಸನ್ನಿವೇಶದಲ್ಲಿ ಇಲ್ಲಿನ ಯುವತಿಯರು ಹಾಗೂ ಮಹಿಳೆಯರಿಗೆ ಸುರಕ್ಷೆ ಇಲ್ಲವಾಗಿದೆ. ರಾಬಿಯಾ ಸೈಫಿ ಪ್ರಕರಣ ಸೇರಿದಂತೆ ದೇಶದಲ್ಲಿ ನಡೆದ ಮತ್ತು ನಡೆಯುತ್ತಿರುವ ಎಲ್ಲ ರೀತಿಯ ಮಹಿಳಾ ಅತ್ಯಾಚಾರ ಪ್ರಕರಣಗಳು ದೇಶಕ್ಕೆ ಒಂದು ಕಪ್ಪು ಚುಕ್ಕಿಯಾಗಿದೆ ಎಂದರು.

ತಂಝೀಮ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಮಾತನಾಡಿದರು. ನ್ಯಾಯಾವಾದಿ ಸೈಯ್ಯದ್ ಇಮ್ರಾನ್ ಲಂಕಾ ಮನವಿ ಪತ್ರವನ್ನು ಓದಿದರು. ಸಹಾಯಕ ಆಯುಕ್ತೆ ಮಮತಾ ದೇವಿ ಮನವಿ ಸ್ವೀಕರಿಸಿ ಮಾತನಾಡಿ, ಘಟನೆಯ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಿಯವರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭಟ್ಕಳ ಮುಸ್ಲಿಮ್ ಯುತ್ ಫೆಡರೇಶನ್ ಅಧ್ಯಕ್ಷ ಅಝೀಝರ‍್ರಹ್ಮಾನ್ ರುಕ್ನುದ್ದೀನ್ ನದ್ವಿ, ತಂಝೀಮ್ ಸಂಸ್ಥೆಯ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಪರ್ವಾಝ್, ಭಟ್ಕಳ ಪುರಸಭೆ ಅಧ್ಯಕ್ಷ ಪರ್ವೇಝ್ ಕಾಶಿಮಜಿ, ಖಮರ್ ಸಾದಾ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News