ಸರಕಾರಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2021-09-12 11:31 GMT

ಬೆಂಗಳೂರು, ಸೆ. 12: `ಬೆಂಗಳೂರು ನಗರದಲ್ಲಿ ಒಂದು ಸರಕಾರಿ ಶಾಲೆ ಯಾವ ಖಾಸಗಿ ಶಾಲೆಗೂ ಕಡಿಮೆ ಇಲ್ಲದ ರೀತಿ ಅಭಿವೃದ್ದಿ ಹೊಂದಿ ತಲೆ ಎತ್ತಿ ನಿಂತಿರುವುದು ಹೆಮ್ಮೆಯ ಸಂಗತಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿಯ ಹಳೆ ಸರಕಾರಿ ಶಾಲಾ ಕಟ್ಟಡವನ್ನು ಉನ್ನತೀಕರಿಸಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, `ನಮ್ಮ ಸರಕಾರಿ ಶಾಲೆಗಳು ಖಾಸಗಿ ವಲಯದ ಶಾಲೆಗಳಿಗೆ ಪೈಪೋಟಿ ನೀಡಿ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಈ ಶಾಲೆಯು ಯಶ್ವಸಿಯಾಗಿದೆ' ಎಂದು ನುಡಿದರು.

`ಸಾರ್ವಜನಿಕರ ಒಳಿತಿಗೆ ಈ ಜಾಗ ಉಪಯೋಗವಾಗಿ ಇದೊಂದು ಮಾದರಿ ಶಾಲೆ ಎನಿಸಿದೆ. ನಾಗರಿಕರಿಗೆ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಪ್ರಯತ್ನಶೀಲವಾಗಿದೆ. ಜನರ ಮನೆ ಬಾಗಿಲಿಗೆ ವಿನೂತನ ಸೌಲಭ್ಯಗಳು ಹಾಗೂ ಆರೋಗ್ಯ ಸೇವೆಯನ್ನು ಕಲ್ಪಿಸಲು ಸರಕಾರ ಬದ್ಧವಾಗಿದೆ' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂಗೋಳ್ಳಿ ರಾಯಣ್ಣ ಕ್ರೀಡಾ ಸಂಕೀರ್ಣದ ಆವರಣದಲ್ಲಿ ಹೊಸ ಕೋವಿಡ್ ತಪಾಸಣಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿಲಾಯಿತು. ವಸತಿ ಹಾಗೂ ಮೂಲಭೂತ ಸೌಕರ್ಯ ಸಚಿವ ವಿ.ಸೋಮಣ್ಣ, ಕಂದಾಯ ಸಚಿವ ಆರ್. ಅಶೋಕ್, ಅಬಕಾರಿ ಸಚಿವ ಕೆ.ಗೋಪಾಲಯ್ಯ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ತೋಟಗಾರಿಕೆ ಸಚಿವ ಮುನಿರತ್ನ ಹಾಗೂ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News