ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ

Update: 2021-09-12 11:51 GMT

ಬೆಂಗಳೂರು, ಸೆ. 12: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ.15ರ ವರೆಗೆ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಸೆ.15ರ ತನಕ ಮಳೆ ಮುಂದುವರೆಯಲಿದೆ.

ಕೊಪ್ಪಳ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಬೀದರ್, ಕಲಬುರಗಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಕರ್ನಾಟಕದಲ್ಲಿ ಜೂನ್ ತಿಂಗಳಿನಲ್ಲಿ ವಾಡಿಕೆಗಿಂತ ಶೇ.10ರಷ್ಟು ಮಳೆಯಾಗಿತ್ತು. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆ ಕಂಡು ಬಂದಿದೆ. ಸೆಪ್ಟೆಂಬರ್‍ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜುಲೈನಲ್ಲಿ ಶೇ.7ರಷ್ಟು, ಆಗಸ್ಟ್‍ನಲ್ಲಿ ಶೇ.24ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಆದರೆ ಈಗ ಮಳೆಯಾದರೆ ಭತ್ತ, ಹತ್ತಿ, ಕಡಲೆ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಲಿದೆ ಎಂದು ತಜ್ಞರು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News