ಆಸ್ಕರ್ ನಿಧನ: ಆಸ್ಪತ್ರೆಗೆ ಗಣ್ಯರ ಭೇಟಿ
ಮಂಗಳೂರು, ಸೆ.13: ಕಾಂಗ್ರೆಸ್‌ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನದ ಹಿನ್ನೆಲೆಯಲ್ಲಿ ಗಣ್ಯರು ನಗರದ ಯೆನೆಪೊಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದಾರೆ.
ಆಸ್ಕರ್‌ಗೆ ಚಿಕಿತ್ಸೆ ನೀಡಿದ ವೈದ್ಯ ಡಾ.ಸಿ.ಜೆ.ರಂಜನ್ ಸುದ್ದಿಗಾರರೊಂದಿಗೆ ಮಾತನಾಡಿ, ಆಸ್ಕರ್ ಯೋಗಾಭ್ಯಾಸ ಮಾಡುವ ಸಂದರ್ಭದಲ್ಲಿ ಬಿದ್ದು ಗೋಡೆಗೆ ತಲೆ ತಾಗಿದ್ದರಿಂದ ಅವರ ಮೆದುಳಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆಸ್ಪತ್ರೆಗೆ ದಾಖಲಾದ ವಾರದ ಬಳಿಕ ಅವರಿಗೆ ಆಪರೇಶನ್ ಮಾಡಲಾಯಿತು. ಬಳಿಕ ಅಲ್ಪ ಪ್ರಮಾಣದಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಮಂಜುನಾಥ ಭಂಡಾರಿ ಮಾತನಾಡಿ, ಕಾಂಗ್ರೆಸ್ ಪಕ್ಷವಲ್ಲದೇ ಇಡೀ ದೇಶವೇ ಪ್ರಭಾವಿ ರಾಜಕಾರಣಿ, ಮಾನವತಾವಾದಿಯನ್ನು ಕಳೆದುಕೊಂಡಿದೆ. ಇಂದು ನಮ್ಮೆಲ್ಲರನ್ನು ಅಗಲಿದ್ದಾರೆ ಎಂದರು.
ಮಾಜಿ ಸಚಿವ ಬಿ.ರಮಾನಾಥ ರೈ, ವಿನಯಕುಮಾರ್ ಸೊರಕೆ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿದರು.
ಸಂಜೆಯ ವೇಳೆ ಆಸ್ಕರ್ ರ ಮೃತದೇಹವನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ರವಾನಿಸಲಾಯಿತು.