ಮನೆಗಳ ಅಕ್ರಮ-ಸಕ್ರಮ ಸುಪ್ರೀಂಕೋರ್ಟ್ ತಡೆಯಾಜ್ಞೆ ತೆರವಿಗೆ ಸರಕಾರ ಕ್ರಮ: ಸಚಿವ ಆರ್.ಅಶೋಕ್

Update: 2021-09-15 14:53 GMT

ಬೆಂಗಳೂರು, ಸೆ.15: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆಗಳ ಸಕ್ರಮ ಮಾಡುವ ಸಂಬಂಧ ಸುಪ್ರೀಂಕೋರ್ಟ್‍ನಲ್ಲಿ ಇರುವ ತಡೆಯಾಜ್ಞೆ ತೆರವಿಗೆ ಸರಕಾರ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. 

ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಕಾಂತರಾಜ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಕ್ರಮ ಸಕ್ರಮ ಯೋಜನೆಯಿಂದ ಸುಮಾರು 10 ರಿಂದ 15 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಸರಕಾರಕ್ಕೂ ಸಾವಿರಾರು ಕೋಟಿ ರೂ. ಆದಾಯ ಬರಲಿದೆ. ಸುಪ್ರೀಂಕೋರ್ಟ್‍ನಲ್ಲಿ ತಡೆಯಾಜ್ಞೆ ಇರುವುದರಿಂದ ಅಕ್ರಮ ಸಕ್ರಮ ಮಾಡಲು ಸಾಧ್ಯವಾಗಿಲ್ಲ. ಆದಷ್ಟು ಬೇಗ ಇದನ್ನು ತೆರವುಗೊಳಿಸಲು ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು. 

ರಾಜ್ಯ ಸರಕಾರ ಅಕ್ರಮ ಸಕ್ರಮ ಕಾಯ್ದೆಯನ್ನು ಜಾರಿಗೆ ತಂದಿತ್ತು. ಆದರೆ, ಕೆಲವರು ನ್ಯಾಯಾಲಯಕ್ಕೆ ಹೋಗಿದ್ದರಿಂದ ತಡೆಯಾಜ್ಞೆ ಇದೆ. ಅದನ್ನು ತೆರವು ಮಾಡುವ ಸಂಬಂಧ ಮುಖ್ಯಮಂತ್ರಿಗಳು ಸೇರಿ ಕಾನೂನು ತಜ್ಞರ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ಅಲ್ಲದೆ ಹುಬ್ಬಳ್ಳಿ-ಧಾರವಾಡ ಸೇರಿ ರಾಜ್ಯದ ಬಹುತೇಕ ನಗರ ಪ್ರದೇಶಗಳಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಮನೆ, ಕಟ್ಟಡಗಳ ಸಕ್ರಮ ಮಾಡುವುದರಿಂದ ಸರಕಾರಕ್ಕೆ ಸಾವಿರಾರು ಕೋಟಿ ರೂ. ಆದಾಯ ಬರಲಿದೆ. ಈ ನಿಟ್ಟಿನಲ್ಲಿ ಸರಕಾರ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು. 

ಶಿವರಾಂ ಕಾರಂತ ಬಡಾವಣೆಯಲ್ಲಿ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದಂತೆ ಐದು ಮಂದಿ ಉಪನೋಂದಣಾಧಿಕಾರಿಗಳನ್ನು ಅಮಾನತು ಮಾಡಿ ಅದರ ವಿವರವನ್ನು ಪ್ರಮಾಣ ಪತ್ರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ನಗರ ಪ್ರದೇಶಗಳನ್ನು ಹೊರತುಪಡಿಸಿ ಗ್ರಾಮಾಂತರ ಪ್ರದೇಶಗಳಲ್ಲಿ ಅಕ್ರಮ ಸಕ್ರಮಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇ-ಸ್ವತ್ತು ತಂತ್ರಾಂಶದ ಮೂಲಕ ಕಂದಾಯ ನಿವೇಶನ ನೋಂದಣಿ ಬಗ್ಗೆ ಸಮಗ್ರ ಮಾಹಿತಿ ಪಡೆಯಬಹುದು ಎಂದು ಅವರು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News