ಅಂತರ್ಜಾತಿ ವಿವಾಹ: 3 ಲಕ್ಷ ರೂ. ಪ್ರೋತ್ಸಾಹ ಧನ; ಕೋಟ ಶ್ರೀನಿವಾಸ ಪೂಜಾರಿ

Update: 2021-09-17 16:17 GMT

ಬೆಂಗಳೂರು, ಸೆ. 17: ಅಂತರ್ಜಾತಿ ವಿವಾಹವಾದವರಿಗೆ 2.50 ರಿಂದ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನ ಪರಿಷತ್‍ನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಆರ್.ಪ್ರಸನ್ನಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರೋತ್ಸಾಹ ಧನ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕೆಲವರಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಗೊತ್ತಾಗದಿದ್ದರೆ ಪ್ರೋತ್ಸಾಹ ಧನ ನೀಡುವುದು ವಿಳಂಬವಾಗಿದೆ ಎಂದು ಹೇಳಿದರು. 

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಬರದಿದ್ದರೆ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಅವರಿಗೆ ಪ್ತ್ಸಾರೋಹ ಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಎಸ್ಸಿ, ಎಸ್ಟಿ ಸಮುದಾಯದ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮೂರು ತಿಂಗಳಿಗೊಮ್ಮೆ ಕುಂದುಕೊರತೆ ಸಭೆ ನಡೆಸಿ ಅವರ ಮೇಲೆ ಇರುವ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದರು.

ತಾವು ಸಮಾಜ ಕಲ್ಯಾಣ ಸಚಿವರಾದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸುದೀರ್ಘವಾಗಿ ಕುಂದುಕೊರತೆ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಎಸ್‍ಸಿಎಸ್‍ಪಿ-ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾದ ಹಣ ಆ ವರ್ಷದಲ್ಲಿ ಬಳಕೆಯಾಗದಿದ್ದರೆ ಅದು ಮುಂದಿನ ವರ್ಷಕ್ಕೆ ವರ್ಗಾವಣೆಯಾಗಲಿದೆ. ಹೀಗಾಗಿ ಅನುದಾನ ಬಳಕೆಯಾಗಿಲ್ಲ ಎನ್ನುವ ಆತಂಕ ಬೇಡ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News