ಧರ್ಮಸ್ಥಳ, ಕುಕ್ಕೆ ಶ್ರೀ ದೇವಸ್ಥಾನಕ್ಕೆ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ : ದ.ಕ. ಜಿಲ್ಲಾಧಿಕಾರಿ

Update: 2021-09-18 13:12 GMT

ಮಂಗಳೂರು, ಸೆ.18: ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ತೆರವುಗೊಳಿಸಿ ಆದೇಶ ಹೊರಡಿಸಿದ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಕೆಲವು ಷರತ್ತುಗಳೊಂದಿಗೆ ಸೇವೆ ಹಾಗೂ ಸಾರ್ವಜನಿಕರ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ದೇವಾಲಯಗಳಲ್ಲಿ ಕೋವಿಡ್ ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು, ದೇವಸ್ಥಾನದ ಆಡಳಿತ ವರ್ಗವು ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊಂದಿರತಕ್ಕದ್ದು. ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿದಂತೆ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿಯನ್ನು ಪಡೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.

ದೇವಾಲಯಗಳಿಗೆ ಸೇವೆಗೆ ಬರುವ ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 72 ಗಂಟೆಗಳಿಗಿಂತ ಮುಂಚಿತವಾಗಿ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದಲ್ಲಿ ಮಾತ್ರ ಸೇವೆಗೆ ಅವಕಾಶ ನೀಡಬೇಕು. ಭಕ್ತರಿಗೆ ಲಸಿಕೆ ಪಡೆಯುವ ಬಗ್ಗೆ ಸಲಹೆಗಳನ್ನು ನೀಡುವ ಕುರಿತು ಹಾಗೂ ಜಾಗೃತಿ ಮೂಡಿಸಲು ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ದೇವಾಲಯಕ್ಕೆ ಬರುವ ಸಾರ್ವಜನಿಕರು ಕೋವಿಡ್ ಲಸಿಕೆ ಪಡೆಯದಿದ್ದಲ್ಲಿ, ಅಂತಹವರಿಗೆ ಲಸಿಕೆ ನೀಡಲು ಅನುಕೂಲವಾಗುವಂತೆ ಸಂಬಂಧಪಟ್ಟ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ದೇವಸ್ಥಾನಗಳಲ್ಲಿ ಕೋವಿಡ್ ಲಸಿಕೆ ಕೇಂದ್ರ ತೆರೆಯಲು ಹಾಗೂ ಜನಸಂದಣಿಯಾಗದಂತೆ ಲಸಿಕೆ ನೀಡಲು ಕ್ರಮ ವಹಿಸಬೇಕು.

ದೇವಾಲಯಗಳಲ್ಲಿ ನಡೆಯುವ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಪಂಚಾಮೃತ ಮಹಾಭಿಷೇಕ, ನಾಗಪ್ರತಿಷ್ಠೆ ಸಹಿತ ವಿವಿಧ ಸೇವೆಗಳನ್ನು ಆದಷ್ಟು ಮಿತಿಗೊಳಿಸುವುದು ಹಾಗೂ ಜನಸಂದಣಿಯಾಗದಂತೆ ದಿನವೊಂದಕ್ಕೆ ದೇವಳದ ಸ್ಥಳ ಸಾಮರ್ಥ್ಯವನ್ನು ಹೊಂದಿಕೊಂಡು ಕನಿಷ್ಠ ಸಂಖ್ಯೆಯಲ್ಲಿ ಸೇವೆಗಳನ್ನು ನಡೆಸಲು ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News