ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಬೃಹತ್ ಪಾದಯಾತ್ರೆ

Update: 2021-09-20 13:08 GMT

ಬೆಂಗಳೂರು, ಸೆ.20: ಕರ್ನಾಟಕ ರಾಜ್ಯ ಮೇಕೆದಾಟು ಹೋರಾಟ ಸಮಿತಿ ವತಿಯಿಂದ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಮೇಕೆದಾಟುನಿಂದ ವಿಧಾನಸೌಧದವರೆಗೆ ಬೃಹತ್ ಪಾದಯಾತ್ರೆಯನ್ನು ಇದೇ ಸೆ.23ರಿಂದ ಸೆ.28ರವರೆಗೆ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ ಇತರೆ ಎಲ್ಲಾ ಸಂಘಟನೆಗಳು ಭಾಗವಹಿಸುವಂತೆ ಸಮಿತಿಯ ಉಪಾಧ್ಯಕ್ಷೆ ಕಲ್ಪನಾ ಶಿವಣ್ಣ ಅವರು ಕರೆಕೊಟ್ಟರು.

ಬೆಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟನ್ನು ನಿರ್ಮಿಸಿದರೆ, ಸಮುದ್ರಕ್ಕೆ ಹರಿದು ವ್ಯರ್ಥವಾಗುತ್ತಿರುವ ನದಿ ನೀರನ್ನು ಬಯಲುಸೀಮೆ ಜಿಲ್ಲೆಗಳಾದ ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ತುಮಕೂರು ಜಿಲ್ಲೆಗಳಲ್ಲಿರುವ ಜನ-ಜಾನುವಾರುಗಳಿಗೆ ಕುಡಿಯುವ ನೀರನ್ನು ಒದಗಿಸಬಹುದು. ಅಲ್ಲದೆ 400 ಮೆಗಾವ್ಯಾಟ್ ವಿದ್ಯುತ್ತನ್ನು ಸಹ ತಯಾರಿಸಬಹುದು. ಹಾಗೆಯೇ ಈ ಪ್ರದೇಶಗಳ ಅಂತರ್ಜಲವನ್ನು ವೃದ್ಧಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ಮೊದಲು ಬಸವರಾಜ ಬೊಮ್ಮಾಯಿ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ಮೇಕೆದಾಟು ಅಣೆಕಟ್ಟನ್ನು ನಿರ್ಮಿಸುವುದಾಗಿ ಪ್ರತಿಜ್ಞೆ ಮಾಡಿದ್ದರು. ಅದೃಷ್ಟವಶಾತ್ ಅವರು ಈಗ ಮುಖ್ಯಮಂತ್ರಿಗಳಾಗಿದ್ದಾರೆ, ಅಲ್ಲದೆ ರಾಜ್ಯ ಮತ್ತು ಕೇಂದ್ರಗಳಲ್ಲಿ ಒಂದೇ ಪಕ್ಷ ಸರಕಾರವನ್ನು ರಚಿಸಿದೆ ಆದ್ದರಿಂದ ಯೋಜನೆಯ ಅನುಮೋದನೆಗೆ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಸರಕಾರವು ಅಣೆಕಟ್ಟನ್ನು ನಿರ್ಮಿಸಲೇಬೇಕು ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಪದಾಧಿಕಾರಿಗಳಾದ ಜಿಜಿ ಹಳ್ಳಿ ನಾರಾಯಣಸ್ವಾಮಿ, ಮಲ್ಲಪ್ಪ, ಮಧುಸೂದನ್, ಚಲಪತಿ, ಎಂ.ಡಿ.ಶಿವಕುಮಾರ್, ಕುಮಾರ್, ಸಂಪತ್‍ಕುಮಾರ್ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News