ಅಕ್ರಮ ಗೋ ಸಾಗಾಟ, ಮತಾಂತರ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ: ಸಚಿವ ಸುನಿಲ್ ಕುಮಾರ್

Update: 2021-09-24 17:04 GMT
ಸಚಿವ ಸುನಿಲ್ ಕುಮಾರ್ (File photo)

ಕಾರ್ಕಳ: ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗೋ ಸಾಗಾಟ ಮತ್ತು  ಕಾನೂನು ಬಾಹಿರ ಮತಾಂತರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು ಈ ನಿಟ್ಟಿನಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕುವಂತೆ ಹಾಗೂ ಕಠಿಣ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ  ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ ಸುನಿಲ್ ಕುಮಾರ್ ಸೂಚನೆ ನೀಡಿದ್ದಾರೆ. 

ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಜಿಲ್ಲೆ ಹಾಗೂ ತಾಲೂಕಿನ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ಹೆಚ್ಚಿಸಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡುವ ಮೂಲಕ ವಾಹನ ತಪಾಸಣೆ, ಈ ಹಿಂದೆ ಅಕ್ರಮ ಗೋ ಸಾಗಾಣಿಕೆಯಲ್ಲಿ ಭಾಗಿಯಾಗಿದ್ದ ಶಂಕಿತರನ್ನು ಮತ್ತು ಮಧ್ಯವರ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆಗೆ ಒಳಪಡಿಸುವಂತೆ ಸೂಚಿಸಿದರು.

ಪೊಲೀಸ್ ಠಾಣಾಧಿಕಾರಿಗಳ ಗಸ್ತಿಗೆ ಸುಸಜ್ಜಿತ ವಾಹನಗಳನ್ನು ಹಂಚಿಕೆ ಮಾಡುವಂತೆ ಸೂಚಿಸಿದಲ್ಲದೇ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಕೆಗಳ ವಿರುದ್ಧ ಜಾಗೃತಿ ಸಭೆಗಳನ್ನು ನಡೆಸುವಂತೆ ಸಲಹೆ ನೀಡಿದರು.  

ಈ ಸಭೆಯಲ್ಲಿ ಕುಂದಾಪುರ ಸಹಾಯಕ ಕಮಿಷನರ್, ಕಾರ್ಕಳ ತಹಶೀಲ್ದಾರ್ ಹಾಗೂ ಜಿಲ್ಲೆಯ ಮೂರು ಪೊಲೀಸ್ ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News