ಸೆ.27ರಿಂದ ಎಸೆಸೆಲ್ಸಿ ಪೂರಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2021-09-24 17:58 GMT

ಮಂಗಳೂರು, ಸೆ.24: ಇದೇ ಸೆ.27ರಿಂದ 29ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ದ.ಕ. ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆಯೂ ಆದೇಶದಲ್ಲಿ ತಿಳಿಸಲಾಗಿದೆ.

ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು ಅಥವಾ ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಅದೇ ರೀತಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳ ಸಾಗಾಟ ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಎಸೆಸೆಲ್ಸಿ ಪೂರಕ ಪರೀಕ್ಷೆಗಳು ನಡೆಯುವ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News