×
Ad

ಉಡುಪಿ: ‘ಭಾರತ್ ಬಂದ್’ ರೈತರ ಹೋರಾಟ ಬೆಂಬಲಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Update: 2021-09-27 13:05 IST

ಉಡುಪಿ, ಸೆ.27: ಮೂರು ಕೃಷಿ ಕಾಯಿದೆಗಳು, ವಿದ್ಯುತ್ ಮಸೂದೆ ತಿದ್ದುಪಡಿ ರದ್ಧತಿಗಾಗಿ, ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗಾಗಿ ಹಾಗೂ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧದ ಭಾರತ ಬಂದ್‌ಗೆ ಬೆಂಬಲವಾಗಿ ವಿವಿಧ ಸಂಘಟನೆಗಳು ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಸಿದವು.

ನಗರದ ಜೋಡುಕಟ್ಟೆಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯು ಕೋರ್ಟ್ ರಸ್ತೆ, ಹಳೆ ಡಯನ ಸರ್ಕಲ್‌ನಲ್ಲಿ ತಿರುಗಿ ವಾಪಾಸ್ಸು ಅದೇ ಮಾರ್ಗ ದಲ್ಲಿ ಜೋಡುಕಟ್ಟೆಯ ಮೂಲಕ ಅಜ್ಜರಕಾಡು ಹುತಾತ್ಮ ಸ್ಮಾರಕರದ ಎದುರು ಸಮಾಪ್ತಿಗೊಂಡಿತು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಭಾಗವಹಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ದಸಂಸ ಅಂಬೇಡ್ಕರ್ ವಾದ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್, ಅಂಗನವಾಡಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುಶೀಲಾ ನಾಡ ಮಾತನಾಡಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಪಾಧ್ಯಕ್ಷ ಇದ್ರೀಸ್ ಹೂಡೆ, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಎರ್ಮಾಳ್ ಶಶಿಧರ್ ಶೆಟ್ಟಿ, ಸಿಐಟಿಯು ಜಿಲ್ಲಾ ಖಜಾಂಚಿ ಶಶಿಧರ ಗೊಲ್ಲ, ಉಡುಪಿ ತಾಲೂಕು ಕಾರ್ಯದರ್ಶಿ ಕವಿರಾಜ್, ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ, ಗಣೇಶ್ ನೆರ್ಗಿ, ಪಿಎಫ್‌ಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಜೀದ್ ಉಚ್ಚಿಲ, ಸಾಮಾಜಿಕ ಕಾರ್ಯಕರ್ತ ಇಕ್ಬಾಲ್ ಮನ್ನಾ, ದಸಂಸ ಮುಖಂಡ ಶಿವಾನಂದ ಮೂಡಬೆಟ್ಟು, ಸಾಲಿಡಾರಿಟಿ ಯೂತ್‌ಮೂವ್ಮೆಂಟ್ ಉಡುಪಿ ಜಿಲ್ಲಾ ಕಾರ್ಯದರ್ಶಿ ಝಾಕರಿಯಾ, ಸಹ ಕಾರ್ಯದರ್ಶಿ ಸೈಯದ್ ಅಕ್ರಮ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News