ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ; ಎಸ್‍ಐಟಿ ಅಸ್ತಿತ್ವ ಪ್ರಶ್ನಿಸಿದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2021-09-27 14:55 GMT

ಬೆಂಗಳೂರು, ಸೆ.27: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸೀಡಿ ಪ್ರಕರಣದ ತನಿಖೆಗೆ ಎಸ್‍ಐಟಿ ತಂಡ ರಚನೆಯ ಕಾನೂನು ಬದ್ಧತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅ.7ಕ್ಕೆ ಮುಂದೂಡಿದೆ.

ರಮೇಶ್ ಜಾರಕಿಹೊಳಿ ಅಶ್ಲೀಲ ಸೀಡಿ ಪ್ರಕರಣ ಸಂಬಂಧ ದಾಖಲಾಗಿದ್ದ ಎರಡು ದೂರುಗಳ ತನಿಖೆ ಪುರ್ಣಗೊಳಿಸಿರುವ ಎಸ್‍ಐಟಿ ತನಿಖಾ ತಂಡ ಎರಡು ಪ್ರಕರಣದಲ್ಲಿ ಅಂತಿಮ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಸಂತ್ರಸ್ತ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರ ಇಲ್ಲದ ಹಿನ್ನೆಲೆಯಲ್ಲಿ ಬಿ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಹನಿಟ್ರ್ಯಾಪ್ ಮಾಡಿರುವ ಆರೋಪ ಸಂಬಂಧ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಎಸ್‍ಐಟಿ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆದರೆ, ಎಸ್‍ಐಟಿ ತನಿಖಾ ತಂಡದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಂತ್ರಸ್ತ ಯುವತಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು. 

ಎಸ್‍ಐಟಿ ತನಿಖೆ ಪೂರ್ಣಗೊಳಿಸಿದೆ. ಅಂತಿಮ ವರದಿಯನ್ನು ಸಲ್ಲಿಸಲು ಅನುಮತಿ ನೀಡುವಂತೆ ಸರಕಾರದ ಪರ ವಕೀಲರು ಹೈಕೋರ್ಟ್‍ಗೆ ಮನವಿ ಮಾಡಿದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಸಂತ್ರಸ್ತ ಯುವತಿ ಪರ ವಕೀಲೆ ಇಂದಿರಾ ಜೈ ಸಿಂಗ್, ಎಸ್‍ಐಟಿ ತಂಡ ರಚನೆ ಸಂಬಂಧ ಗೃಹ ಸಚಿವರು ಆದೇಶ ಮಾಡಿದ್ದಾರೆ. ಎಸ್‍ಐಟಿ ರಚನೆಯ ಮಾನದಂಡಗಳನ್ನು ಪಾಲನೆ ಮಾಡಿಲ್ಲ. ಮಿಗಿಲಾಗಿ ಎಸ್‍ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ತನಿಖೆ ನಡೆದಿದೆ. ಎಸ್‍ಐಟಿ ರಚನೆಗೆ ಮಾನ್ಯತೆ ಇಲ್ಲ ಎಂದು ಪೀಠಕ್ಕೆ ತಿಳಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಅ.7ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News