ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಯ ಬಂಧನ: 14 ವಾಹನಗಳು ವಶಕ್ಕೆ
ಚಿಕ್ಕಮಗಳೂರು, ಅ.1: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿ ವ್ಯಕ್ತಿಯೋರ್ವನನ್ನು ಬಂಧಿಸಿರುವ ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣೆಯ ಪೊಲೀಸರು ಆರೋಪಿಯಿಂದ 5.10 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ತನ್ನ ಬೈಕ್ ಕಳುವಾಗಿದೆ ಎಂದು ಅಜ್ಜಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗಿರಿಯಾಪುರ ಗ್ರಾಮದ ತಿಪ್ಪೇಶಪ್ಪ ಎಂಬವರು ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಅಜ್ಜಂಪುರ ಪೊಲೀಸರು ಠಾಣಾಧಿಕಾರಿ ಲಿಂಗರಾಜು ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದರು. ಇತ್ತೀಚೆಗೆ ಅಜ್ಜಂಪುರ ತಾಲೂಕಿನ ಅತಿಮೊಗ್ಗೆ ಗ್ರಾಮದಲ್ಲಿ ಬೈಕ್‍ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಶಿವನಿ ಗ್ರಾಮದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಆತ ಬೈಕ್ ಕಳುವು ಮಾಡುತ್ತಿದ್ದ ವಿಷಯ ಬೆಳಕಿಗೆ ಬಂದಿದೆ.
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 5.10 ಲಕ್ಷ ರೂ. ಮೌಲ್ಯದ 14 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಎಸ್ಪಿ ಅಕ್ಷಯ್ ಎಂ.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.