ವಿಧಾನಸಭೆ ಉಪಚುನಾವಣೆ; ಎರಡು ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು: ಅರುಣ್ ಸಿಂಗ್ ವಿಶ್ವಾಸ

Update: 2021-10-03 12:06 GMT

ಬೆಂಗಳೂರು, ಅ. 3: `ರಾಜ್ಯದ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಸರ್ವಸಿದ್ಧತೆ ಮಾಡಿಕೊಂಡಿದೆ. ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ' ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರವಿವಾರ ಇಲ್ಲಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗುವುದು. ಆ ಪಟ್ಟಿಯನ್ನು ರಾಜ್ಯದಿಂದ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಿ ಕೊಡಲಾಗುತ್ತದೆ. ಅಲ್ಲಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಣೆ ನೀಡಿದರು.

ರಾಜ್ಯ ಚುನಾವಣಾ ಸಮಿತಿ ಸಂಭಾವ್ಯರ ಪಟ್ಟಿಯನ್ನು ಸಿದ್ಧಗೊಳಿಸಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸುತ್ತದೆ. ಆ ಬಳಿಕ ಕೇಂದ್ರ ಚುನಾವಣಾ ಸಮಿತಿಯು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಈ ಕ್ರಮವನ್ನು ಅನುಸರಿಸುತ್ತಿದ್ದೇವೆ ಎಂದು ಅವರು ಬಿ.ವೈ.ವಿಜಯೇಂದ್ರ ಅವರ ಸ್ಪರ್ಧೆ ಕುರಿತ ಇನ್ನೊಂದು ಪ್ರಶ್ನೆಗೆ ಅರುಣ್ ಸಿಂಗ್ ಅವರು ಉತ್ತರ ನೀಡಿದರು.

ಸರ್ವ ಜನಾಂಗದ ಅಭ್ಯುದಯಕ್ಕಾಗಿ ರಾಜ್ಯ ಬಿಜೆಪಿ ಸರಕಾರವು ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ. ಬಸವರಾಜ ಬೊಮ್ಮಾಯಿ ಅವರ ಸರಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದು, ಅದರ ಬಗ್ಗೆ ಜನರಿಗೆ ತಿಳಿಸಬೇಕಿದೆ. ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷವು ಅತ್ಯುತ್ತಮವಾಗಿ ಸಂಘಟನಾ ಕಾರ್ಯ ಮಾಡುತ್ತಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News