ಅರ್ಬಾಝ್ ನಿಗೂಢ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮಕ್ಕೆ ಸತೀಶ ಜಾರಕಿಹೊಳಿ ಆಗ್ರಹ
Update: 2021-10-06 20:49 IST
ಬೆಳಗಾವಿ, ಅ. 6: ಇಲ್ಲಿನ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅರ್ಬಾಝ್ ಅಫ್ತಾಬ್ ಮುಲ್ಲಾ ನಿಗೂಢ ಕೊಲೆ ಪ್ರಕರಣದ ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಇಂದಿಲ್ಲಿ ತಿಳಿಸಿದ್ದಾರೆ.
ಬುಧವಾರ ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಕೊಲೆ ಪ್ರಕರಣದ ಸತ್ಯಾಸತ್ಯತೆಯನ್ನು ಪೊಲೀಸರು ತ್ವರಿತಗತಿಯಲ್ಲಿ ಬಯಲಿಗೆ ತರಬೇಕು. ಶೀಘ್ರವಾಗಿ ತನಿಖೆ ನಡೆಸಿ ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ. ಹತ್ಯೆಗೆ ಮೂಲ ಕಾರಣ ಏನು ಎಂಬುದನ್ನು ಪತ್ತೆ ಹಚ್ಚಬೇಕೆಂದು ಒತ್ತಡ ಹೇರಲಾಗುವುದು ಎಂದು ಸ್ಪಷ್ಟಪಡಿಸಿದರು.