ಬೆಳಗಾವಿ; ರಾಜ್ಯೋತ್ಸವಕ್ಕೆ ಮಾರ್ಗಸೂಚಿ ಪ್ರಕಾರ ಅನುಮತಿ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

Update: 2021-10-12 13:00 GMT
ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ 

ಬೆಳಗಾವಿ, ಅ.12: ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಅದೇ ರೀತಿ ಸರಕಾರದ ಮಾರ್ಗಸೂಚಿ ಹಾಗೂ ಕಾನೂನು ಚೌಕಟ್ಟಿನಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರಾಳ ದಿನ ಆಚರಣೆಗೆ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ. ರಾಜ್ಯೋತ್ಸವ ಮೆರವಣಿಗೆಗೆ ಸರಕಾರದ ಕೋವಿಡ್ ಮಾರ್ಗಸೂಚಿ ಆಧರಿಸಿ ಅನುಮತಿ ನೀಡಲಾಗುವುದು. ಎಲ್ಲರೂ ಸೇರಿ ಶಾಂತಿಯುತ ಹಾಗೂ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸೋಣ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.

ಜಿಲ್ಲೆಯಲ್ಲಿ ಶೇ.84 ರಷ್ಟು ಲಸಿಕಾಕರಣ: ಕಳೆದ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳ ರೀತಿಯಲ್ಲಿ ರಾಜ್ಯೋತ್ಸವ ಆಚರಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಶೇ.84 ರಷ್ಟು ಲಸಿಕಾಕರಣ ಆಗಿದ್ದು, ಕೋವಿಡ್ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಆದರೆ ಸಂಪೂರ್ಣವಾಗಿ ಹೋಗಿಲ್ಲ. ಸದ್ಯಕ್ಕೆ ಜಿಲ್ಲೆಯಲ್ಲಿ ಸೋಂಕಿನ ಪ್ರಮಾಣ ಶೇ.0.3 ರಷ್ಟಿದೆ. ಎಲ್ಲರೂ ಕಡ್ಡಾಯವಾಗಿ ಕೋವಿಡ್ ನಿರೋಧಕ ಲಸಿಕೆ ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಸಂಘಟನೆಗಳು ಜಾಗೃತಿ ಮಾಡಿಸಬೇಕು ಎಂದು ಅವರು ಕರೆ ನೀಡಿದರು.

ಪೊಲೀಸ್ ಆಯುಕ್ತ ಡಾ.ಕೆ.ತ್ಯಾಗರಾಜನ್ ಮಾತನಾಡಿ, ರಾಜ್ಯೋತ್ಸವ ಮೆರವಣಿಗೆ ಶಾಂತಿಯುತವಾಗಿ ನಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆಯನ್ನು ನೀಡಿದರು.

ಅದ್ಧೂರಿ ರಾಜ್ಯೋತ್ಸವಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ: ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಅಧ್ಯಕ್ಷ ಅಶೋಕ ಚಂದರಗಿ ಮಾತನಾಡಿ, ಈ ಬಾರಿ ರಾಜ್ಯೋತ್ಸವ ಅದ್ಧೂರಿಯಾಗಿ ನಡೆಯಬೇಕು. ಸರಕಾರದ ಎಲ್ಲ ಮಾರ್ಗಸೂಚಿ ಪಾಲಿಸುವ ಮೂಲಕ ಸಂಭ್ರಮದ ರಾಜ್ಯೋತ್ಸವ ಆಚರಣೆಗೆ ಅವಕಾಶ ಕಲ್ಪಿಸಬೇಕು. ಕಿತ್ತೂರು ಉತ್ಸವ ಸಂದರ್ಭದಲ್ಲಿ ಮುಂಬಯಿ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ನಾಮಕರಣ ಮಾಡಲು ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಬೆಳಗಾವಿ ಉಪ ವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ, ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಲಂಡನ್ ಕನ್ನಡಪರ ಸಂಘಟಕ ರಾಜು ಮೇತ್ರಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News